ಬುಧವಾರ ಸಿಎಂ ಬಿಎಸ್‌ವೈ ಸುದ್ದಿಗೋಷ್ಠಿ: ಲಾಕ್​ಡೌನ್ ವಿಸ್ತರಣೆ ಜೊತೆಗೆ ಪರಿಹಾರದ ಪ್ಯಾಕೇಜ್ ಘೋಷಣೆ ಸಾಧ್ಯತೆ

Update: 2021-05-18 14:43 GMT

ಬೆಂಗಳೂರು, ಮೇ 18: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇ 19ರಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟದ ಹಿರಿಯ ಸಹದ್ಯೋಗಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಮೇ 24ರವರೆಗೆ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ವಿಸ್ತರಣೆ ಮಾಡುವುದು ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ಮೇ 31ರವರೆಗೆ ವಿಸ್ತರಿಸುವ ಸಾಧ್ಯತೆಗಳನ್ನು ಅಲ್ಲಗೆಳೆಯುವಂತಿಲ್ಲ.

ಬಡವರು, ಕೂಲಿ ಕಾರ್ಮಿಕರು ಹಾಗೂ ಶ್ರಮಿಕ ವರ್ಗದವರಿಗೆ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಸಮಾಜದ ವಿವಿಧ ಶ್ರಮಿಕ ವರ್ಗಗಳಿಗೆ ಆರ್ಥಿಕ ನೆರವನ್ನು ಘೋಷಿಸಿದ್ದ ಮಾದರಿಯಲ್ಲೆ ಈ ಬಾರಿಯೂ ಮುಖ್ಯಮಂತ್ರಿ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News