'ನೀಟ್' ಮುಂದೂಡದಂತೆ ಕೇಂದ್ರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದೆ

Update: 2021-05-20 15:51 GMT

ಬೆಂಗಳೂರು, ಮೇ 20: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಮುಂದೂಡುವ ನಿರ್ಧಾರ ಕೈಬಿಡಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಒಂದು ವಾರ ಕಾಲ ಮುಂದೂಡಿದೆ.

ಹುಬ್ಬಳ್ಳಿಯ ಜಿ.ಬಿ.ಕುಲಕರ್ಣಿ ಮೆಮೋರಿಯಲ್ ಲೀಗಲ್ ಟ್ರಸ್ಟ್‍ನ ಡಾ.ವಿನೋದ್ ಕುಲಕರ್ಣಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. ಕೆಲಕಾಲ ವಕೀಲರ ವಾದ ಆಲಿಸಿದ ಪೀಠ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಪ್ರಧಾನಮಂತ್ರಿ ಕಚೇರಿಯ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿ ಮತ್ತು ರಾಜ್ಯ ಸರಕಾರವನ್ನು ಪ್ರತಿವಾದಿಯನ್ನಾಗಿಸಲಾಗಿದೆ.

ಅರ್ಜಿದಾರರ ಮನವಿ: ಜನವರಿಯಲ್ಲಿ ನೀಟ್ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು, ಬಳಿಕ ಪರೀಕ್ಷೆಯನ್ನು ಎ.18ಕ್ಕೆ ಮುಂದೂಡಲಾಗಿತ್ತು. ಇದೀಗ ಆಗಸ್ಟ್ 31ರ ವರೆಗೂ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಲಾಗುತ್ತಿದೆ.

ಇದು ವೈದ್ಯಕಿಯ ಸ್ನಾತಕೋತ್ತರ ಪದವಿಯ(ಎಂಡಿ ಮತ್ತು ಎಂಎಸ್) ಆಕಾಂಕ್ಷಿಗಳ ಆತಂಕಕ್ಕೆ ಕಾರಣವಾಗಿದೆ. ಕೊರೋನದಿಂದ ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷ ವ್ಯರ್ಥ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News