ಬೆಳಗಾವಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಮಾವೇಶ: ಆಯೋಜಕರ ವಿರುದ್ಧ ಎಫ್‌ಐಆರ್ ಯಾಕಿಲ್ಲ; ಹೈಕೋರ್ಟ್ ಪ್ರಶ್ನೆ

Update: 2021-05-25 18:05 GMT

ಬೆಂಗಳೂರು, ಮೇ 25: ಬೆಳಗಾವಿಯಲ್ಲಿ ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಕೋವಿಡ್-19 ಮಾರ್ಗಸೂಚಿಗಳ ಉಲ್ಲಂಘನೆ ಕುರಿತು ಸಲ್ಲಿಸಿರುವ ಅರ್ಜಿ ಸಂಬಂಧ ಅಲ್ಲಿನ ನಗರ ಪೊಲೀಸ್ ಆಯುಕ್ತರು ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅನುಸಾರ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರಿಗೆ ಕೇವಲ ದಂಡ ವಿಧಿಸಲಾಗಿದೆ. ಪೊಲೀಸ್ ಆಯುಕ್ತರಿಗೆ ಕಾಯ್ದೆಯ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಆಯೋಜಕರ ವಿರುದ್ಧ ಪೊಲೀಸರು ಏಕೆ ಎಫ್‌ಐಆರ್ ದಾಖಲಿಸಿಲ್ಲ. ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಪ್ರಮಾಣಪತ್ರವನ್ನು ಒಪ್ಪಲು ಸಾಧ್ಯವಿಲ್ಲ ಎಂದಿರುವ ಪೀಠ, ಹೊಸದಾಗಿ ಸಮರ್ಪಕ ಮಾಹಿತಿ ಒಳಗೊಂಡ ಪ್ರಮಾಣ ಪತ್ರವನ್ನು ಜೂ.3ರ ಒಳಗೆ ಸಲ್ಲಿಸುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದೆ.

ಇದೇ ವೇಳೆ, ಸಭೆ-ಸಮಾರಂಭಗಳಲ್ಲಿ ಭಾಗಿಯಾಗಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವ ಪ್ರತಿಯೊಬ್ಬರ ವಿರುದ್ಧವೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಈ ಹಿಂದೆ ನೀಡಿದ್ದ ಆದೇಶ ಪಾಲಿಸಿರುವ ಕುರಿತು ಅನುಪಾಲನಾ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿದ ಪೀಠ, ವಿಚಾರಣೆಯನ್ನು ಜೂ.4ಕ್ಕೆ ಮುಂದೂಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯು ಜ.17ರಂದು ಸಮಾವೇಶ ಆಯೋಜಿಸಿತ್ತು. ಸುರಕ್ಷಿತ ಅಂತರ ನಿಯಮಗಳನ್ನು ಉಲ್ಲಂಘಿಸಿ ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸಿದ್ದರು ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News