ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಆರೋಪಿಗಳ ಬಂಧನ: ಗೃಹ ಸಚಿವ ಬೊಮ್ಮಾಯಿ

Update: 2021-05-28 11:50 GMT

ಬೆಂಗಳೂರು, ಮೇ 28: ಯುವತಿಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಪೊಲೀಸರು ಈ ಪ್ರಕರಣವನ್ನು ಭೇದಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಅಪರಾಧ ಎಸಗಿದವರು ಈಶಾನ್ಯ ರಾಜ್ಯಗಳಿಂದ ಬಂದವರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದರು. ವೈರಲ್ ಆದ ವಿಡಿಯೋ ಆಧಾರವಾಗಿಟ್ಟುಕೊಂಡು ಬೆಂಗಳೂರು ಪೊಲೀಸರು ವಿಚಾರಣೆ ಆರಂಭಿಸಿದರು. ಈ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಯುವಕರು ಮತ್ತು ಇಬ್ಬರು ಮಹಿಳೆಯರು ಭಾಗಿಯಾಗಿದ್ದಾರೆ.

ಅವರು ನೀಡಿರುವ ಹೇಳಿಕೆ ಪ್ರಕಾರ ಇನ್ನೂ ಕೆಲ ಆರೋಪಿಗಳು ಕೇರಳದಲ್ಲಿ ಇದ್ದಾರೆ. ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಈ ಪ್ರಕರಣದ ಮೇಲುಸ್ತುವಾರಿ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News