ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ಕೋವಿಡ್ ಲಸಿಕೆ : ಡಿಸಿಎಂ ಅಶ್ವತ್ಥನಾರಾಯಣ

Update: 2021-05-31 15:46 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 31: ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಂಗ ಮಾಡುತ್ತಿರುವವರಿಗೆ ಸಿಹಿ ಸುದ್ದಿ. ಆದ್ಯತಾ ಗುಂಪಿನ ಕೋಟಾದಲ್ಲಿ ಅವರಿಗೆ ನಾಳೆ(ಜೂ 1)ಯಿಂದಲೇ ಕೋವಿಡ್ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುವುದು. ಅವಶ್ಯಕತೆ ಇದ್ದವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದರು. 

ಸದ್ಯದ ಸಂದರ್ಭದಲ್ಲಿ ವಿದೇಶಕ್ಕೆ ಹೋಗಬೇಕಾದರೆ ಲಸಿಕೆ ಪಡೆಯಲೇಬೇಕು ಹಾಗೂ ಆ ಕುರಿತ `ಪ್ರಮಾಣ ಪತ್ರ'ವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಹಾಗೂ ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಈಗ ಸರಕಾರ ಅವರ ಬೇಡಿಕೆಯನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವೀಶೀಲ್ಡ್ ಕೊಡಲಾಗುವುದು ಎಂದು ಅವರು ತಿಳಿಸಿದರು. 

ಕೋವಿಡ್ ಲಸಿಕೆ ಪಡೆಯಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್, ಪಾಸ್‍ಪೋರ್ಟ್ ಹಾಗೂ ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯ. ಅಲ್ಲದೆ, ಸದ್ಯಕ್ಕೆ ಕೋವಿಶೀಲ್ಡ್ ಮೊದಲ ಡೋಸ್ ಪಡೆದವರ ಎರಡನೇ ಡೋಸ್ ಅಂತರವನ್ನು ಇವರ ಅನುಕೂಲಕ್ಕಾಗಿ 12 ವಾರಗಳಿಂದ ಒಂದು ತಿಂಗಳಕ್ಕೆ ಕುಗ್ಗಿಸಲಾಗಿದೆ. ಇದು ಇವರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟಣೆ ನೀಡಿದರು. 

ಮುಖ್ಯವಾಗಿ ಲಸಿಕೆ ನೀಡಿದ ಬಗ್ಗೆ ಇವರಿಗೆ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು. ಅದು ಎರಡನೇ ಡೋಸ್ ಪಡೆದಾಕ್ಷಣ ನೀಡಲಾಗುತ್ತದೆ ಎಂದ ಅವರು, ಇದೇ ರೀತಿ ಆಯಾ ಜಿಲ್ಲೆಗಳಲ್ಲಿಯೂ ಈ ರೀತಿ ಕೋವಿಡ್ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ವಿವರಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News