ಕುತೂಹಲ ಸೃಷ್ಟಿಸಿದ ಬಿ.ವೈ. ವಿಜಯೇಂದ್ರ ದಿಲ್ಲಿ ಪ್ರಯಾಣ
ಬೆಂಗಳೂರು, ಜೂ. 1: ನಾಯಕತ್ವ ಬದಲಾವಣೆ ವಿಷಯ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳವಾರ ಬೆಳಗ್ಗೆ ದಿಢೀರ್ ಹೊಸದಿಲ್ಲಿಗೆ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
'ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಸಿಎಂ ಪುತ್ರ ದಿಲ್ಲಿಗೆ ತೆರಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ವರಿಷ್ಠರ ಭೇಟಿಗೆ ದಿಲ್ಲಿಗೆ ತೆರಳಿ ಭೇಟಿ ಸಾಧ್ಯವಾಗದೆ ಹಿಂದಿರುಗಿದ್ದರು. ಆ ಬಳಿಕ ಬಹಿರಂಗವಾಗಿ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡಿದ್ದರು.
ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಹುಟ್ಟಿಕೊಂಡಿತ್ತು. ಈ ಬೆಳವಣಿಗೆಗಳ ಮಧ್ಯೆಯೇ ವಿಜಯೇಂದ್ರ ದಿಲ್ಲಿಗೆ ತೆರಳಿರುವುದು ಬಿಜೆಪಿ ವಲಯದಲ್ಲಿ ಸಂಶಯಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ವಿಜಯೇಂದ್ರ ದಿಲ್ಲಿಗೆ ತೆರಳಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಅವರು ಯಾರನ್ನು ಭೇಟಿಯಾಗಲಿದ್ದಾರೆಂಬುದು ಬಹಿರಂಗವಾಗಿಲ್ಲ.
ಸಂಪುಟ ಸದಸ್ಯರಾಗಿರುವ ಯೋಗೇಶ್ವರ್ ಹಾಗೂ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಎಸ್‍ವೈ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವುದು ಪಕ್ಷ ಹಾಗೂ ಸರಕಾರಕ್ಕೆ ಮುಜುಗರವನ್ನು ಸೃಷ್ಟಿಸುತ್ತಿದ್ದಾರೆ. ಹೀಗಾಗಿ, ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು. ಯೋಗೇಶ್ವರ್ ಅವರನ್ನು ಸಂಪುಟದಿಂದ ಕೈಬಿಡಲು ಅನುಮತಿ ನೀಡುವುದರ ಜೊತೆಗೆ ಯತ್ನಾಳ್ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಮನವಿ ಮಾಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.