×
Ad

ಎಫ್‍ಐಆರ್ ರದ್ದು ಕೋರಿ ಶಾಸಕ ಶರತ್ ಬಚ್ಚೇಗೌಡ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2021-06-04 17:07 IST

ಬೆಂಗಳೂರು, ಜೂ.4: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ವಿರುದ್ಧ ದಾಖಲಿಸಲಾಗಿದ್ದ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಹೊಸಕೋಟೆ ಠಾಣೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಶರತ್ ಬಚ್ಚೇಗೌಡ ಹಾಗೂ ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಈ ಅರ್ಜಿಯನ್ನು ವಜಾ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಕೆಲಕಾಲ ವಾದ ಮಂಡಿಸಿ, ಬಳಿಕ ಪ್ರಕರಣವನ್ನು ಹೊಸಕೋಟೆ ಜೆಎಂಎಫ್ ಕೋರ್ಟ್ ನಲ್ಲಿಯೇ ಬಗೆಹರಿಸಿಕೊಳ್ಳುವುದಾಗಿ ಪೀಠಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಪೀಠ ಅರ್ಜಿ ವಜಾ ಮಾಡಿ ಆದೇಶಿಸಿದೆ.

ಏನಿದು ಪ್ರಕರಣ: ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ, ಸ್ಥಳೀಯ ಶಾಸಕ ಶರತ್ ಬಚ್ಚೇಗೌಡ ಅವರನ್ನು ಶಿಷ್ಟಾಚಾರಕ್ಕೂ ಸರಕಾರಿ ಕಾಮಗಾರಿಗಳ ಕಾರ್ಯಕ್ರಮಗಳಿಗೆ ಸಚಿವ ಎಂಟಿಬಿ ನಾಗರಾಜ್ ಕರೆಯುತ್ತಿರಲಿಲ್ಲ ಎನ್ನಲಾಗಿದ್ದು, ಈ ವಿಚಾರವಾಗಿ ಕಾಮಗಾರಿಯೊಂದರ ವೇಳೆ ಗದ್ದಲ ಮಾಡಿದ ಶರತ್ ಬಚ್ಚೇಗೌಡರ ಬೆಂಬಲಿಗರೊಬ್ಬರಿಗೆ ಪೊಲೀಸರು ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ವಿಚಾರವಾಗಿ ಶರತ್ ಬಚ್ಚೇಗೌಡ ಕಳೆದ ಜ.30ರಂದು ತಮ್ಮ 500ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರು.

ಈ ಸಂಬಂಧ ಎಫ್‍ಐಆರ್ ದಾಖಲಿಸಿರುವ ಪೊಲೀಸರು, 'ಶರತ್ ಬಚ್ಚೇಗೌಡ ಹಾಗೂ ಅವರ ಬೆಂಬಲಿಗರು ಜ.30ರಂದು ಹೆದ್ದಾರಿ ತಡೆದು, ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ಸೂಟ್‍ಕೇಸ್ ಮಂತ್ರಿ ಎಂಟಿಬಿ ನಾಗರಾಜ್‍ಗೆ ಧಿಕ್ಕಾರ, ಬಿಜೆಪಿ ಸರಕಾರಕ್ಕೆ ಧಿಕ್ಕಾರ ಎಂದು ಕೂಗಿದರು. ಇದನ್ನು ಪ್ರಶ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರು' ಎಂದು ಆರೋಪಿಸಿ ಐಪಿಸಿ ಸೆಕ್ಷನ್ 341, 143, 147, 149, 283ರ ಅಡಿ ಎಫ್‍ಐಆರ್ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News