ಡಿಸೆಂಬರ್ ಅಂತ್ಯದ ವೇಳೆಗೆ 130 ಕೋಟಿ ಜನರಿಗೂ ಕೋವಿಡ್ ಲಸಿಕೆ: ಕೇಂದ್ರ ಸಚಿವ ಸದಾನಂದಗೌಡ

Update: 2021-06-04 17:57 GMT

ಬೆಂಗಳೂರು, ಜೂ.4: ಕೇಂದ್ರ ಸರಕಾರವು ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 130 ಕೋಟಿ ಜನರಿಗೂ ಕೋವಿಡ್ ನಿಯಂತ್ರಣ ಲಸಿಕೆಯನ್ನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಶುಕ್ರವಾರ ಕೆ.ಆರ್.ಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಸ್ಥಳೀಯ ಶಾಸಕರು ಆದ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹಮ್ಮಿಕೊಂಡಿದ್ದ ಕೋವಿಡ್ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರದ ಸುಮಾರು ಒಂದು ಲಕ್ಷ ಬಡ ಕುಟುಂಬಗಳಿಗೆ ದಿನಸಿ ಕಿಟ್‍ಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜೂನ್ ಅಂತ್ಯದ ವೇಳೆಗೆ ರಾಜ್ಯಕ್ಕೆ ಕೇಂದ್ರದಿಂದ 50 ಲಕ್ಷ ಲಸಿಕೆ ನೀಡಲಾಗುತ್ತದೆ, ರಾಜ್ಯ ಸರಕಾರ ಕೂಡ 15 ಲಕ್ಷ ಲಸಿಕೆಯನ್ನು ಖರೀದಿಸಲು ಮುಂದಾಗಿದೆ. ಈ ತಿಂಗಳಲ್ಲಿ ಒಟ್ಟು 65 ಲಕ್ಷದಷ್ಟು ಲಸಿಕೆ ರಾಜ್ಯಕ್ಕೆ ಲಭ್ಯವಾಗಲಿದೆ ಎಂದು ಸದಾನಂದಗೌಡ ಮಾಹಿತಿ ನೀಡಿದರು.

ಬ್ಲಾಕ್ ಫಂಗಸ್ ರೋಗಕ್ಕೆ ಔಷಧ ಸರಬರಾಜು: ಕೋವಿಡ್ ಜೊತೆಗೆ ಈಗ ಬ್ಲಾಕ್ ಫಂಗಸ್ ಸೋಂಕು ಹೆಚ್ಚಳವಾಗುತ್ತಿದೆ. ಈ ರೋಗ ಇದ್ದಕ್ಕಿದ್ದಂತೆ ಉಲ್ಬಣವಾಗಿದ್ದಕ್ಕೆ ಅಗತ್ಯ ಪ್ರಮಾಣದ ಔಷಧ ಸರಬರಾಜು ಮಾಡಲು ಸಾಧ್ಯವಾಗಿಲ್ಲ. ಇದೀಗ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಈ ಸೋಂಕಿಗೆ ಔಷಧ ತಯಾರಾಗುತ್ತಿದೆ. ನಮ್ಮ ದೇಶಕ್ಕೆ 7.2 ಲಕ್ಷ ವಯಲ್ಸ್ ಆಮದಾಗಿದೆ. ಇದರಲ್ಲಿ 2.7 ಲಕ್ಷ ವಯಲ್ಸ್ ಈಗಾಗಲೆ ಅಗತ್ಯವಿರುವ ರಾಜ್ಯಗಳಿಗೆ ಸರಬರಾಜು ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದು ಸದಾನಂದಗೌಡ ಹೇಳಿದರು.

ಕೊರೋನ ಲಾಕ್ ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಒಂದು ಲಕ್ಷ ಆಹಾರ ಪದಾರ್ಥಗಳನ್ನು ಬೈರತಿ ಬಸವರಾಜ ವಿತರಣೆ ಮಾಡುತ್ತಿರುವುದು ನಿಜವಾಗಿಯೂ ಒಂದು ಪುಣ್ಯದ ಕೆಲಸ. ಕ್ಷೇತ್ರದ ಜನ ಮತ ಹಾಕುವ ಮೂಲಕ ಅವರಿಗೆ ಆಶೀರ್ವಾದ ಮಾಡಿದ್ದೀರಿ. ಅವರು ನಿಮಗೆ ಇಂತಹ ಸಂದರ್ಭದಲ್ಲಿ ಸಹಾಯಕ್ಕೆ ಬಂದಿದ್ದಾರೆ. ಸದಾ ಜನರ ನಡುವೆ ಇರುವ ಬಸವರಾಜ ಅಂತಹವರು ಸಮಾಜಕ್ಕೆ ಅವಶ್ಯಕತೆ ಇದೆ. ಅವರಿಗೆ ತಮ್ಮ ಬೆಂಬಲ ಸದಾ ಇರಲಿ ಎಂದು ಆಶಿಸುತ್ತೇನೆ ಎಂದು ಅವರು ಹೇಳಿದರು.

ನಾನು ಪ್ರತಿನಿಧಿಸುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳ ಪೈಕಿ ಕೆ.ಆರ್.ವಿಧಾನಸಭಾ ಕ್ಷೇತ್ರವು ಸೇರಿದೆ. ಇದನ್ನು ಸಚಿವ ಬಸವರಾಜ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಈ ಭಾಗದ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ನನ್ನ ಬೆಂಬಲ, ಸಹಕಾರ ಈ ಕ್ಷೇತ್ರಕ್ಕೆ ಯಾವಾಗಲೂ ಇರುತ್ತದೆ ಎಂದು ಸದಾನಂದಗೌಡ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊರೋನ ನಿಯಂತ್ರಣ ಕುರಿತು ಸಭೆ ಕರೆದಾಗಲ್ಲೆಲ್ಲ ನಾನು ಕೆ.ಆರ್.ಪುರ ಕ್ಷೇತ್ರದ ಬಗ್ಗೆ ಮತ್ತು ಬೈರತಿ ಬಸವರಾಜ ಅವರು ಅಲ್ಲಿ ಕೈಗೊಂಡಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹೀಗಾಗಿ ಬಸವರಾಜ ಅವರ ಕಾರ್ಯವೈಖರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿದಿದೆ ಎಂದು ಸದಾನಂದಗೌಡ ತಿಳಿಸಿದರು.

ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ಕೆ.ಆರ್.ಪುರ ಕ್ಷೇತ್ರದಲ್ಲಿ ಕೋವಿಡ್ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರು, ಕೂಲಿ ಕಾರ್ಮಿಕರು, ಚಾಲಕರು, ದಿನಗೂಲಿ ನೌಕರರಿಗೆ ನೆರವು ನೀಡುವ ಉದ್ದೇಶದಿಂದ ಇವತ್ತು ಒಂದು ಲಕ್ಷ ದಿನಸಿ ಕಿಟ್‍ಗಳನ್ನು ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಕ್ಷೇತ್ರದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನ ನಿಯಂತ್ರಣ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಅದನ್ನು ಹಂತ ಹಂತವಾಗಿ ನೀಡಲಾಗುತ್ತದೆ ಎಂದರು.

ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 200 ಹಾಸಿಗೆಗಳಿಗೆ ಮೇಲ್ದರ್ಜೆಗೆ ಏರಿಸುವ ಗುರಿ ಹೊಂದಿದ್ದು, ಇದಕ್ಕಾಗಿ 13 ಕೋಟಿ ರೂಪಾಯಿಗಳು ವೆಚ್ಚವಾಗಲಿದೆ. ಐಟಿಐ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೇಂದ್ರ ಸರಕಾರ ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಬಸವರಾಜ ಹೇಳಿದರು.

ದಿನಸಿ ಕಿಟ್ ವಿತರಿಸಿದ ಸ್ಥಳಗಳು: ಕೊತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪ, ವಿಜಿನಾಪುರದ ಸೈನಿಕ ಭವನ, ಕಲ್ಕೆರೆಯ ಎನ್.ಆರ್.ಐ.ಲೇಔಟ್, ಟಿ.ಸಿ.ಪಾಳ್ಯದ ಸಂತ ಅಂತೋಣಿ ಶಾಲೆ, ಕುರುಡುಸೊಣ್ಣೆನಹಳ್ಳಿಯ ಲೇಕ್ ಮೌಂಟ್ ಶಾಲೆ, ಎಚ್.ಎ.ಎಲ್ ನ ವಿಭೂತಿ ಪುರ ಶಾಲೆ, ಉದಯ ನಗರದ ಜೈನ ಭವನ, ಎ.ನಾರಾಯಣಪುರದ ಎಮ್.ಇ.ಜಿ. ಲೇಔಟ್, ದೇವಸಂದ್ರದ ಕೆಂಪೇಗೌಡ ಕ್ರೀಡಾಂಗಣದಲ್ಲಿ ದಿನಸಿ ಕಿಟ್‍ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶಿವರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ಬಿಜೆಪಿ ಹಿರಿಯ ಮುಖಂಡ ಗಣೇಶ, ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಎನ್.ಶ್ರೀಕಾಂತ್, ಜಯಪ್ರಕಾಶ್, ನಾಗರಾಜ್, ಸುರೇಶ್, ರಮೇಶ್, ಪಿ.ಜೆ.ಅಂತೋಣಿ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂ.

ಕೆ.ಆರ್.ಪುರ ಕ್ಷೇತ್ರದಲ್ಲಿ ಕೊರೋನದಿಂದ ಮೃತಪಟ್ಟವರ ಕುಟುಂಬಗಳಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಮಾಡುವುದಾಗಿ ಇದೇ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಘೋಷಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News