ರಾಜ್ಯದ ದೂರದ ಪ್ರದೇಶಗಳಿಗೆ ಆರೋಗ್ಯ ಸೌಲಭ್ಯ ಒದಗಿಸುವ ಕುರಿತು ನೀತಿ ರೂಪಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಜೂ.7: ರಾಜ್ಯದ ಗ್ರಾಮೀಣ ಪ್ರದೇಶ ಮತ್ತು ದೂರದ ಪ್ರದೇಶಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಯಾವುದಾದರೊಂದು ನೀತಿಯನ್ನು ರೂಪಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಈ ಕುರಿತು ಬೀದರ್‌ನ ಸಾಮಾಜಿಕ ಕಾರ್ಯಕರ್ತ ಗುರುನಾಥ್ ವಡ್ಡೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಇತರರಿಗೆ ನೋಟಿಸ್ ಜಾರಿಗೊಳಿಸಿತು.
ಸಂವಿಧಾನದ ಪರಿಚ್ಛೇದ 21ರ ಆರೋಗ್ಯ ಹಕ್ಕಿನ ಅಡಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶ ಮತ್ತು ದೂರದ ಪ್ರದೇಶಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ರಾಜ್ಯ ಸರಕಾರದ ಕರ್ತವ್ಯವಾಗಿದೆ. ಕೋವಿಡ್ ಪರಿಸ್ಥಿತಿ ಸಂದರ್ಭದಲ್ಲಿ ಈ ವಿಷಯ ಪ್ರಸ್ತುತವಾಗಿದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು. ವಿಚಾರಣೆಯನ್ನು 2021ರ ಜು.12ಕ್ಕೆ ಮುಂದೂಡಿತು.