ಅನ್‍ಲಾಕ್ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಪರಿಶೀಲನೆ ನಡೆಸಿದೆ: ಡಾ.ಅಶ್ವತ್ಥನಾರಾಯಣ

Update: 2021-06-09 12:33 GMT

ಬೆಂಗಳೂರು, ಜೂ. 9: `ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಅನ್‍ಲಾಕ್ ಮಾಡುವ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಪರಿಶೀಲನೆ ನಡೆಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದಷ್ಟು ಬೇಗ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ' ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ ಇಲ್ಲಿನ `ದೇವಯ್ಯ ಪಾರ್ಕ್'ನಲ್ಲಿ ಬಿಜೆಪಿ ಮುಖಂಡ ನಾಗೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೆಲ ಜಿಲ್ಲೆಗಳನ್ನು ಹೊರತುಪಡಿಸಿದರೆ ಬಹುತೇಕ ಕಡೆ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಸಂಪರ್ಕ ಕೊಂಡಿ ಕಟ್ ಆಗಿರುವ ಕಾರಣಕ್ಕೆ ವೈರಸ್ ಹತೋಟಿಗೆ ಬಂದಿದೆ. ಹೀಗಾಗಿ ಯಾವ ಕ್ಷೇತ್ರಗಳಲ್ಲಿ ಅನ್‍ಲಾಕ್ ಮಾಡಬೇಕು? ಯಾವ ಕ್ಷೇತ್ರದಲ್ಲಿ ಮಾಡಬಾರದು? ಎಂಬ ಬಗ್ಗೆ ಈಗಾಗಲೇ ಸಿಎಂ ಅವರು ತಜ್ಞರು, ಅಧಿಕಾರಿಗಳು ಹಾಗೂ ಸಚಿವರಿಂದ ಸಲಹೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಉಳಿದಂತೆ, ಕೋವಿಡ್ ಸೋಂಕು ಕಡಿಮೆಯಾದರೂ ಜನರು ಎಚ್ಚರ ತಪ್ಪಬಾರದು. ಕೋವಿಡ್ ನಿಯಮಗಳನ್ನು ಚಾಚೂ ತಪ್ಪಬಾರದು. ಲಸಿಕೆಯನ್ನು ಎಲ್ಲರೂ ಕಡ್ಡಾಯವಾಗಿ ಪಡೆಯಬೇಕು. ಈಗಾಗಲೇ 18-44 ವಯಸ್ಸಿನ ಮುಂಚೂಣಿ ಕಾರ್ಯಕರ್ತರಿಗೆ ಯಶಸ್ವಿಯಾಗಿ ಲಸಿಕೆ ಹಾಕಲಾಗುತ್ತಿದೆ. ಅದೇ ರೀತಿ 45 ವರ್ಷಕ್ಕೂ ಮೇಲ್ಪಟ್ಟ ಪ್ರತಿಯೊಬ್ಬರೂ ತಪ್ಪದೇ ಬಂದು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅಶ್ವತ್ಥ ನಾರಾಯಣ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News