ಲಾಕ್‌ಡೌನ್‌ನಿಂದ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಇಳಿಕೆ: ಸಂಸದೆ ಶೋಭಾ ಕರಂದ್ಲಾಜೆ

Update: 2021-06-09 12:45 GMT

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆಗೊಳ್ಳುವ ತನಕ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಮುಂದುವರಿಸುವ ಜೊತೆಗೆ ಕೋವಿಡ್ ಮೂರನೇ ಅಲೆಯ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋವಿಡ್-19 ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಲಾಕ್‌ಡೌನ್‌ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದೇ ಕಾರಣ. ಗ್ರಾಮೀಣ ಭಾಗಗಳಲ್ಲಿ ಈಗಲೂ 50ಕ್ಕೂ ಅಧಿಕ ಕೋವಿಡ್ ಪಾಸಿಟಿವ್ ಪ್ರಕರಣಗಳಿರುವ ಗ್ರಾಪಂ ಗಳಲ್ಲಿ ಸಂಪೂರ್ಣ ಲಾಕ್‌ಡೌನ್‌ನ್ನು ಮುಂದುವರಿಸಬೇಕು ಎಂದವರು ಅಭಿಪ್ರಾಯಪಟ್ಟರು.

ಕಳೆದ ಐದು ದಿನಗಳಿಂದ 50ಕ್ಕೂ ಹೆಚ್ಚು ಪ್ರಕರಣಗಳಿರುವ ಗ್ರಾಪಂಗಳನ್ನು ಪೂರ್ಣ ಪ್ರಮಾಣದಲ್ಲಿ ಲಾಕ್‌ಡೌನ್‌ಗೊಳಿಸಿದ ಹಿನ್ನೆಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿವೆ. ಹೀಗಾಗಿ ಈಗಲೂ 50ಕ್ಕೂ ಅಧಿಕ ಪ್ರಕರಣ ಗಳಿರುವ ಜಡ್ಕಲ್, ಶಿರೂರು, ನಾಡ, ಬೆಳ್ಮಣ್, ಮಿಯಾರು, ಪಳ್ಳಿ, ಕುಕ್ಕುಂದೂರು, ನಲ್ಲೂರು, ಮರ್ಣೆ, ವರಂಗ, ಗಂಗೊಳ್ಳಿ, ಆಲೂರು, ಶಿರ್ವ, ಬೆಳ್ಳೆ, ಆವರ್ಸೆ, ಕೊಕ್ಕರ್ಣೆ ಗ್ರಾಪಂಗಳ ವ್ಯಾಪ್ತಿಯಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಬೇಕೆಂದರು.

ಮೂರನೇ ಅಲೆ ಕೋವಿಡ್ ನಿರೋಧಕ ಲಸಿಕೆ ಪಡೆಯದ ಮಕ್ಕಳನ್ನು ಬಾಧಿಸುವ ಸಾಧ್ಯತೆಗಳಿವೆ. ತಜ್ಞರು ಸಹ ಇದೇ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಅಗತ್ಯರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದೊಮ್ಮೆ ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಉತ್ತಮ ಚಿಕಿತ್ಸೆ ನೀಡಬೇಕು ಎಂದರು.

ಕಾರ್ಕಳ ಶಾಸಕ ಸುನೀಲ್‌ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರ ಮನೆಗಳನ್ನು ಕಡ್ಡಾಯವಾಗಿ ಸೀಲ್‌ಡೌನ್ ಮಾಡಬೇಕು ಎಂದರಲ್ಲದೇ ಪ್ರತಿ ಗ್ರಾಪಂನಲ್ಲೂ ಟೆಸ್ಟಿಂಗ್,ಟ್ರೇಸಿಂಗ್ ಹಾಗೂ ಟ್ರೀಟ್‌ಮೆಂಟ್ ನಿಯಮ ತಪ್ಪದೇ ಪಾಲಿಸಬೇಕು ಎಂದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಕೋವಿಡ್ ನಿರೋಧಕ ಲಸಿಕೆಯನ್ನು ನೀಡಲು ಟೋಕನ್ ವಿತರಣೆಯನ್ನು ಪಾರದರ್ಶಕವಾಗಿ ಮಾಡುವುದರೊಂದಿಗೆ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಕೊರೋನ ಲಸಿಕೆಯನ್ನು ಜಿಲ್ಲೆ ಯಲ್ಲಿ 2,75,064 ಜನರಿಗೆ ಒಂದನೇ ಡೋಸ್ ಹಾಗೂ 87,360 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಈ ಮೂಲಕ ಶೇ.20.37 ಸಾಧನೆಯಾಗಿದೆ. ಕಾಪು ತಾಲೂಕಿನ ಕೊತ್ತಲ್‌ಕಟ್ಟೆ ಹಾಗೂ ಭರತ್‌ನಗರಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಕಂಟೈನ್‌ಮೆಂಟ್ ಝೋನ್ ಘೋಷಿಸಿ ಸೋಂಕು ಹರಡದಂತೆ ಕ್ರಮ ವಹಿಸಲಾಗುುದು ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್‌ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಸದ್ಯ 4085 ಸಕ್ರೀಯ ಪ್ರಕರಣಗಳಿದ್ದು, ಅವುಗಳಲ್ಲಿ 487 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 149 ಮಂದಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಹಾಗೂ 3,449 ಜನರು ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 18 ಕಪ್ಪು ಶಿಲೀಂದ್ರ ಪ್ರಕರಣಗಳು ಕಂಡುಬಂದಿದ್ದು, ಇವುಗಳಲ್ಲಿ 6 ಪ್ರಕರಣ ಜಿಲ್ಲೆದಾಗಿದ್ದರೆ, 11 ಹೊರ ಜಿಲ್ಲೆಗಳದು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ 4 ಪ್ರಕರಣಗಳು ಶಿಫ್ಟ್ ಆಗಿವೆ. ಜಿಲ್ಲೆಯಲ್ಲಿ ಇಬ್ಬರು ಮರಣ ಹೊಂದಿದ್ದರೆ, ಆರು ಮಂದಿ ಗುಣಮುಖರಾಗಿ ದ್ದಾರೆ. 10 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News