ದ.ಕ., ಮೈಸೂರು ಸಹಿತ 11 ಜಿಲ್ಲೆಗಳಲ್ಲಿ ಜೂ.21ರವರೆಗೆ ಲಾಕ್‍ಡೌನ್: ಉಳಿದ ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ

Update: 2021-06-10 17:42 GMT

ಬೆಂಗಳೂರು, ಜೂ. 10: `ಕೋವಿಡ್-19 ಎರಡನೆ ಅಲೆ ತಡೆಗಟ್ಟಲು ರಾಜ್ಯದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಹಾಗೂ ಕೊಡಗು ಸೇರಿ 11 ಜಿಲ್ಲೆಗಳಲ್ಲಿ ಜೂ.14ರಿಂದ 21ರ ಬೆಳಗ್ಗೆ 6ಗಂಟೆಯ ವರೆಗೆ `ಲಾಕ್‍ಡೌನ್' ಮುಂದುವರಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಸಲಹೆಯನ್ನು ಆಧರಿಸಿ ನಿರ್ಬಂಧವನ್ನು ಕೊಂಚ ಸಡಿಲಿಸಲಾಗಿದೆ.

ಗುರುವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, `ಮೇಲ್ಕಂಡ ಹನ್ನೊಂದು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಸೋಂಕು ತಡೆಗಟ್ಟುವ ದೃಷ್ಟಿಯಿಂದ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ' ಎಂದು ಸ್ಪಷ್ಟಪಡಿಸಿದರು.

ಸಡಿಲಿಕೆ: `ಉಳಿದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ರಾಜ್ಯ ಸರಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ಮಾಡಲಾಗಿದೆ, ಜೂ. 14ರ ಬೆಳಗ್ಗೆ 6 ಗಂಟೆಯಿಂದ ಜೂ.21ರ ಬೆಳಗ್ಗೆ 6ರ ವರೆಗೆ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಎಲ್ಲ ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರಿಗಳು ಶೇ.30ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ' ಎಂದು ಯಡಿಯೂರಪ್ಪ ತಿಳಿಸಿದರು.

ದಿನಸಿ ಸಹಿತ ಎಲ್ಲ ಅಗತ್ಯ ವಸ್ತುಗಳ ಅಂಗಡಿಗಳನ್ನು ಈಗಿರುವ ಸಮಯ ಬೆಳಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲು ಅನುಮತಿಸಲಾಗಿದೆ ಹಾಗೂ ನಿಮಾಣ ಚಟುವಟಿಕೆ ಸಂಬಂಧಿಸಿದ ಸಿಮೆಂಟ್ ಹಾಗೂ ಸ್ಟೀಲ್(ಕಬ್ಬಿಣ) ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ' ಎಂದು ಯಡಿಯೂರಪ್ಪ ಹೇಳಿದರು.

ನಿರ್ಬಂಧ ಹೇರಿರುವ ಹನ್ನೊಂದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉದ್ಯಾನವನಗಳನ್ನು(ಪಾರ್ಕ್) ಬೆಳಗ್ಗೆ 5 ಗಂಟೆಯಿಂದ 10 ಗಂಟೆಯ ವರೆಗೆ ಹಿರಿಯ ನಾಗರಿಕರು ಸೇರಿದಂತೆ ವಾಯುವಿಹಾರಿಗಳ ಅನುಕೂಲಕ್ಕಾಗಿ ತೆರೆಯಲು ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುವು ಮಾಡಿಕೊಡಲಾಗಿದೆ' ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.

ಆಟೋರಿಕ್ಷಾ ಮತ್ತು ಟ್ಯಾಕ್ಸಿಗಳಲ್ಲಿ ಕೋವಿಡ್ ಸೋಂಕು ಹರಡದಂತೆ ಕೇವಲ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಿ, ಅವುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. `ಕೋವಿಡ್ ಕರ್ಫ್ಯೂ' ಪ್ರತಿನಿತ್ಯ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರುತ್ತದೆ. `ವಾರಂತ್ಯದ ಕರ್ಫ್ಯೂ' ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರುತ್ತದೆ. ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು' ಎಂದು ಯಡಿಯೂರಪ್ಪ ತಿಳಿಸಿದರು.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ (ಆಟೋ, ಟ್ಯಾಕ್ಸಿ ಹೊರತುಪಡಿಸಿ) ಇತರೆ ಯಾವುದೇ ಸಾರಿಗೆ ಸಂಚಾರ ಇರುವುದಿಲ್ಲ. ಹೊಟೇಲ್‍ಗಳಲ್ಲಿ ಪಾರ್ಸಲ್‍ಗೆ ಮಾತ್ರವೇ ಅವಕಾಶ ಇರಲಿದೆ. ಅಂತರ ಜಿಲ್ಲೆ ಮತ್ತು ಅಂತರ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಅಗತ್ಯ ಸೇವೆಗಳು ಸೇರಿದಂತೆ ಹಣ್ಣು, ತರಕಾರಿ, ಸರಕು ಸೇವೆಗಳ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ.ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ, ಡಾ.ಕೆ.ಸುಧಾಕರ್, ಅರವಿಂದ ಲಿಂಬಾವಳಿ, ಜಗದೀಶ್ ಶೆಟ್ಟರ್, ಆರ್.ಅಶೋಕ್, ನಾರಾಯಣಗೌಡ, ಬಿ.ಸಿ.ಪಾಟೀಲ್, ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News