×
Ad

ಎನ್.ಎಫ್.ಎಸ್.ಎಂ ಅಭಿಯಾನದಡಿ 12.60 ಕೋಟಿ ರೂ. ಮೌಲ್ಯದ ಬಿತ್ತನೆ ಬೀಜ ಮಿನಿಕಿಟ್ ವಿತರಣೆ: ಸಚಿವ ಬಿ.ಸಿ.ಪಾಟೀಲ್

Update: 2021-06-14 23:48 IST

ಬೆಂಗಳೂರು, ಜೂ.14: ತೊಗರಿ, ಹೆಸರು, ಶೇಂಗಾ, ಸೋಯಾ ಅವರೆ ಬೆಳೆಗಳ ವಿಸ್ತೀರ್ಣ ಹಾಗೂ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನ ನೀಡಲು ರೈತರಿಗೆ ಪ್ರಮುಖವಾಗಿ ಇವುಗಳನ್ನು ಬೆಳೆಯುವ 19 ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳನ್ನು ಮಿನಿಕಿಟ್ ರೂಪದಲ್ಲಿ “ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ”(ಎನ್.ಎಫ್.ಎಸ್.ಎಂ) ಯೋಜನೆಯಡಿ ರೈತರಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಇಲ್ಲಿಯವರೆಗೆ 12.60 ಕೋಟಿ ರೂ. ಮೌಲ್ಯದ ಮಿನಿಕಿಟ್‍ಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಸೋಮವಾರ ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎನ್.ಎಫ್.ಎಸ್.ಎಂ ಯೋಜನೆಯಡಿ 4 ಕೆಜಿ ತೊಗರಿಯನ್ನು 16 ಜಿಲ್ಲೆಗಳಿಗೆ, 4 ಕೆ.ಜಿ.ಹೆಸರು 4 ಜಿಲ್ಲೆಗಳಿಗೆ 20 ಕೆ.ಜಿಯಂತೆ 8 ಜಿಲ್ಲೆಗಳಿಗೆ ಹಾಗೂ 8 ಕೆ.ಜಿಯಂತೆ 2 ಜಿಲ್ಲೆಗಳಿಗೆ ಸೋಯಾ ಅವರೆಗಳ ಮಿನಿಕಿಟ್‍ಗಳನ್ನು ವಿತರಿಸಲಾಗಿದ್ದು, ಮಿಶ್ರಬೆಳೆಗಳನ್ನು ಬೆಳೆಯಲು ಈ ಅಭಿಯಾನದಡಿ ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

2020-21ನೇ ಸಾಲಿನಲ್ಲಿ 153.08 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದಲ್ಲಿ ಶೇ.2 ರಷ್ಟು ಹಾಗೂ ರಾಜ್ಯದ ಸರಾಸರಿಗೆ ಇದನ್ನು ಹೋಲಿಸಿದರೆ ಕರ್ನಾಟಕದಲ್ಲಿ ಶೇ.10 ರಷ್ಟು ಹೆಚ್ಚಿನ ಆಹಾರ ಧಾನ್ಯಗಳ ಉತ್ಪಾದನೆಯಾಗಿದೆ. ಕೋವಿಡ್ ಸಂಕಷ್ಟದಲ್ಲಿಯೂ ಕೂಡ ಕಳೆದ ಬಾರಿ ದಾಖಲೆಯ ಪ್ರಮಾಣದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಾಗಿರುವುದನ್ನು ನೋಡಿದರೆ ಕೃಷಿಯತ್ತ ಜನರ ಒಲವು ಹಾಗೂ ಕೋವಿಡ್ ಅವಧಿಯಲ್ಲಿಯೂ ರೈತರ ಶ್ರಮಕ್ಕೆ ಇದು ಸಾಧನೆಯಾಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಬಿತ್ತನೆ ಗುರಿ: ಮುಂಗಾರು ಹಂಗಾಮಿಗೆ 77 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಿದ್ದು, ಇಲ್ಲಿಯವರೆಗೆ 11.73 ಲಕ್ಷ ಹೆಕ್ಟೇರ್ ಬಿತ್ತನೆ ಅಂದರೆ ಶೇ.15.23 ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದ್ದು, 7.74 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯತೆಯಿದ್ದು, ಇಲ್ಲಿಯವರೆಗೆ 1.79 ಲಕ್ಷ ಕ್ವಿಂಟಾಲ್ ವಿತರಣೆಯಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ 1.15 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನುಯಿದೆ ಎಂದು ಅವರು ಮಾಹಿತಿ ನೀಡಿದರು.

ರಸಗೊಬ್ಬರ-ಮಳೆ ವಿವರ: ಎಪ್ರಿಲ್‍ನಿಂದ ಜೂನ್‍ವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್ ಹಾಗೂ ಯೂರಿಯಾ ಸೇರಿದಂತೆ ಒಟ್ಟು 12,77,815 ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆಯಿದ್ದು, ಇದರಲ್ಲಿ ಒಟ್ಟು 8,02.504 ಮೆ.ಟನ್ ಸರಬರಾಜು, ಒಟ್ಟು 11,54,320 ಆರಂಭಿಕ ಶಿಲ್ಕು, 7,84,075 ಮಾರಾಟವಾಗಿದ್ದು, ಇನ್ನೂ 11,72,750 ದಾಸ್ತಾನು ಉಳಿದಿದೆ. ಈ ಬಾರಿ ಹಂಗಾಮಿನಲ್ಲಿ ಇಲ್ಲಿಯವರೆಗೆ 12 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಇಲ್ಲಿಯವರೆಗೆ ಎಲ್ಲಿಯೂ ರಸಗೊಬ್ಬರವಾಗಲೀ, ಬಿತ್ತನೆ ಬೀಜದ ಕೊರತೆ ಕಂಡುಬಂದಿಲ್ಲ ಎಂದು ಅವರು ಹೇಳಿದರು.

ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿಸುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಕೃಷಿ ವಿಚಕ್ಷಣಾ ದಳ ನಿರಂತರವಾಗಿ ಕಾಳಸಂತೆಕೋರರು, ನಕಲಿ ಮಾರಾಟಗಾರರ ಮೇಲೆ ದಾಳಿ ಮಾಡುತ್ತಲೇ ಇದೆ. ಕಳೆದ ಬಾರಿ 1731.63 ಲಕ್ಷ ಮೌಲ್ಯದ ಕೃಷಿ ಪರಿಕರ ನಕಲಿ ಬಿತ್ತನೆ ಬೀಜ ರಸಗೊಬ್ಬರ ವಶಪಡಿಸಿಕೊಳ್ಳಲಾಗಿದ್ದು, 263 ಮೊಕದ್ದಮೆಗಳನ್ನು ನ್ಯಾಯಾಲಯದಲ್ಲಿ ಹೂಡಲಾಗಿದೆ ಎಂದು ಅವರು ತಿಳಿಸಿದರು.

ಈ ಬಾರಿ 2021-22ನೇ ಸಾಲಿನಲ್ಲಿ ಎಪ್ರಿಲ್ 1 ರಿಂದ ಜೂನ್ 11 ರವರೆಗೆ 424.52 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಹಾವೇರಿ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜಪ್ತಿ ಮಾಡಲಾಗಿದೆ. ಇನ್ನೂ ಎಪ್ರಿಲ್ 1 ರಿಂದ ಜೂ 13 ರವರೆಗೆ ಶೇ.31 ಹೆಚ್ಚುವರಿ ಅಂದರೆ 169 ಮಿಮೀ ವಾಡಿಕೆ ಮಳೆಯಾಗಿದ್ದು, 222 ಮಿ.ಮೀ ವಾಸ್ತವಿಕ ಮಳೆಯಿತ್ತು ಎಂದು ಬಿ.ಸಿ.ಪಾಟೀಲ್ ವಿವರಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: 2021-22ನೇ ಸಾಲಿನಲ್ಲಿ 53,35.967 ಕೇಂದ್ರ ಸರಕಾರದಿಂದ ರೈತ ಫಲಾನುಭವಿಯಾಗಿದ್ದು, ಇದರಲ್ಲಿ 1067.1934 ಕೋಟಿ ರೂ.ಆರ್ಥಿಕ ನೆರವು ನೀಡಲಾಗಿದ್ದು, 55,07,256 ಫಲಾನುಭವಿಗಳಿಗೆ ಇಲ್ಲಿಯವರೆಗೆ 7017.1520 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರ 47,98.095 ರೈತ ಫಲಾನುಭವಿಗಳಿಗೆ 2849.1632 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಈಗಾಗಲೇ ಶೇ.85 ರಷ್ಟು ಆಧಾರ್ ಲಿಂಕ್ ಮಾಡಿದ್ದೇವೆ. ಶೇ.15ರಷ್ಟು ಅಕೌಂಟ್ ಮೂಲಕ ನೀಡಲಾಗುತ್ತಿದೆ. 2020-21ನೆ ಸಾಲಿನಲ್ಲಿ ಹೆಚ್ಚುವರಿಯಾಗಿ 5.01 ಲಕ್ಷ ಟಾರ್ಪಲಿನ್‍ಗಳನ್ನು ವಿತರಿಸಲಾಗಿದೆ. ರಾಜ್ಯದಲ್ಲಿ 690 ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಿದ್ದು, 210 ಕೃಷಿ ಯಂತ್ರೋಪಕರಣಗಳ ಬ್ಯಾಂಕ್‍ಗಳ ಸ್ಥಾಪನೆ ಮಾಡಲಾಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News