ಮುಖ್ಯಮಂತ್ರಿ ಆಗುವ ಆಸೆ ನನಗೂ ಇದೆ ಎಂದ ಸಚಿವ ಆರ್.ಅಶೋಕ್

Update: 2021-06-16 14:56 GMT

ದೇವನಹಳ್ಳಿ, ಜೂ.16: ಮುಖ್ಯಮಂತ್ರಿ ಆಗುವ ಆಸೆ ನನಗೂ ಇದೆ. ಆದರೆ, ಅದಕ್ಕೆ ಕಾಲ ಕೂಡಿ ಬರಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕಷ್ಟೆ. ಸದ್ಯಕ್ಕೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರುತ್ತಾರೆಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆಯ ಮಾತೇ ಇಲ್ಲ. ಅಂತಹ ಯಾವುದೇ ಚರ್ಚೆ ಪಕ್ಷದಲ್ಲಿ ನಡೆಯುತ್ತಿಲ್ಲ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಕ್ಷಕ್ಕೆ ಶಕ್ತಿ ತುಂಬಲಿಕ್ಕೆ ಆದ್ಯತೆ ಕೊಡುತ್ತಾರೆಯೇ ಹೊರತು ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ ಸಿಗುತ್ತದೆ. ಬಿಜೆಪಿ ತರಬೇತಿ ಸಂಸ್ಥೆ ಇದ್ದಂತೆ. ಎಲ್ಲ ನಾಯಕರಿಗೂ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಎಂ.ಪಿ.ರೇಣುಕಾಚಾರ್ಯ ಶಾಸಕರ ಸಹಿ ಸಂಗ್ರಹ ಮಾಡುತ್ತಿರುವ ಕುರಿತು ಮಾತನಾಡಿದ ಅವರು, ‘ಸಹಿ ಸಂಗ್ರಹಕ್ಕೆ ಪಕ್ಷದಲ್ಲಿ ಬೆಂಬಲ ನೀಡಲ್ಲ. ಇದಕ್ಕೆ ನಮ್ಮ ವಿರೋಧವಿದೆ. ನಳೀನ್ ಕುಮಾರ್ ಕಟೀಲ್ ಕಠಿಣವಾಗಿ ಎಚ್ಚರಿಕೆ ನೀಡಿದ್ದಾರೆ. ಯಾರಾದರೂ ಅದನ್ನು ಮೀರಿದರೆ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ವಿಷಯದಲ್ಲಿ ಕಾಂಗ್ರೆಸ್ ನಾಯಕರಿಗೆ ಮಾಡೋಕೆ ಬೇರೆ ಕೆಲಸವಿಲ್ಲ. 1ರೂ.ಇದ್ದ ಪೆಟ್ರೋಲ್‍ನ್ನು 80ರೂ.ವರೆಗೂ ತಂದವರು ಯಾರು. ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆಯಾಗುವ ಸಂಭವವಿದೆ.

-ಆರ್.ಅಶೋಕ್, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News