ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಭದ್ರಾ, ಹೇಮಾವತಿ, ತುಂಗಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಳ

Update: 2021-06-17 16:08 GMT

ಚಿಕ್ಕಮಗಳೂರು, ಜೂ.17: ಕಾಫಿನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಅಲಲ್ಲಿ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ಧಾರಾಕಾರ ಮಳೆಯಿಂದಾಗಿ ಮಲೆನಾಡಿನ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೂಡಿಗೆರೆ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಬುಧವಾರ ಮಧ್ಯಾಹ್ನ ಕೊಂಚ ಬಿಡುವು ನೀಡಿದ್ದ ಮಳೆ ಗುರುವಾರ ತಾಲೂಕಿನಾದ್ಯಂತ ಧಾರಾಕಾರವಾಗಿ ಸುರಿದಿದೆ. ತಾಲೂಕಿನ ಕಳಸ, ಹೊರನಾಡು, ಕುದುರೆಮುಖ, ಜಾವಳಿ, ಹಿರೇಬೈಲು, ಕೊಟ್ಟಿಗೆಹಾರ, ಬಣಕಲ್, ಕಿರುಗುಂದ, ಜನ್ನಾಪುರ, ಗೋಣಿಬೀಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ನಿರಂತರ ಮಳೆಯಿಂದಾಗಿ ತಾಲೂಕಿನಲ್ಲಿ ನರಿಯುವ ಹೇಮಾವತಿ, ಭದ್ರಾ, ಜಪಾವತಿ ನದಿಗಳು ತುಂಬಿ ಹರಿಯುತ್ತಿವೆ.

ಧಾರಾಕಾರ ಮಳೆಯಿಂದಾಗಿ ಕಳಸ ಪಟ್ಟಣ ಸಮೀಪದಲ್ಲಿ ಹರಿಯುವ ಭದ್ರಾ ನದಿಯಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಿದ್ದು ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮುಳುಗುವ ಹಂತದಲ್ಲಿದೆ. ಕಳಸ ಪಟ್ಟಣ ಸಮೀಪದ ಗಣಪತಿಕಟ್ಟೆ ಗ್ರಾಮದ ಸಮೀಪದಲ್ಲಿ ಭಾರೀ ಮಳೆಯಿಂದಾಗಿ ಧರೆ ಕುಸಿದಿದ್ದು, ಧರೆಯ ಮೇಲಿರುವ ಮನೆಯೊಂದು ಕುಸಿದು ಬೀಳುವ ಹಂತದಲ್ಲಿದೆ. ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿದ್ದ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು, ಮರವು ಆಸ್ಪತ್ರೆ ಮೇಲೆ ಉರುಳಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಅಪಾಯ ತಪ್ಪಿದೆ.

ಉಳಿದಂತೆ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲೂ ಗುರುವಾರ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಭದ್ರಾ, ಹೇಮಾವತಿ, ತುಂಗಾ ನದಿ ಸೇರಿದಂತೆ ಮಲೆನಾಡು ಭಾಗದಲ್ಲಿರುವ ಸಣ್ಣ ನದಿಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿಗಳ ನೀರು ಅಕ್ಕಪಕ್ಕದ ಕಾಫಿ, ಅಡಿಕೆ ತೋಟಗಳಿಗೆ ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯೊಂದಿಗೆ ಗಾಳಿಯೂ ಬೀಸುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ. ನೂರಾರು ವಿದ್ಯುತ್ ಕಂಬಗಳೂ ಧರೆಗುರುಳಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಹಲವು ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದ ಬಳಿ ಮುಂಜಾರಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಕಾರುಗಳು ನಜ್ಜುಗುಜಾಗಿವೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಲೂಕಿನ ಮುಗ್ರಹಳ್ಳಿ ಗ್ರಾಮದಲ್ಲಿ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಬಳಿ ನೀರಿನ ರಭಸಕ್ಕೆ ಮಣ್ಣು ಸವಕಳಿಯಾಗಿ ಸೇತುವೆಯೇ ಕುಸಿಯುವ ಹಂತಕ್ಕೆ ತಲುಪಿದ್ದು, ಸೇತುವೆ ಮೇಲೆ ವಾಹನ ಸಂಚಾರವನ್ನು ನಿಷೇದಿಸಲಾಗಿದೆ. ಕಳೆದ ಬಾರಿ ಅತಿವೃಷ್ಟಿ ವೇಳೆ ಈ ಸೇತುವೆಗೆ ಹಾನಿಯಾಗಿದ್ದು, ದುರಸ್ತಿ ಮಾಡದ ಪರಿಣಾಮ ಸೇತುವೆ ಮತ್ತಷ್ಟು ಶಿಥಿಲಗೊಂಡಿತ್ತು. ತಾಲೂಕಿನ ಚಾರ್ಮಾಡಿ ಘಾಟ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂ ಕುಸಿತವೂ ಉಂಟಾಗಿದ್ದು, ಹೆಚ್ಚು ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News