ಉಡುಪಿ: ಕೋವಿಡ್ ಗೆ ಮೂವರು ಬಲಿ; 188 ಮಂದಿಗೆ ಕೊರೋನ ಸೋಂಕು

Update: 2021-06-18 14:20 GMT

ಉಡುಪಿ, ಜೂ.18: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 188 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿವೆ. ದಿನದಲ್ಲಿ ಮೂವರು ಕೋವಿಡ್‌ಗೆ ಬಲಿಯಾಗಿದ್ದು, 330 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸದ್ಯ 2167 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಉಡುಪಿಯ 71 ಮತ್ತು 70 ವರ್ಷ ಪ್ರಾಯದ ಮಹಿಳೆಯರು ಹಾಗೂ ಕುಂದಾಪುರದ 73 ವರ್ಷ ಪ್ರಾಯದ ಪುರುಷ ಮೃತಪಟ್ಟಿದ್ದಾರೆ. ಇವರು ಗಂಭೀರ ಕೋವಿಡ್ ಗುಣಲಕ್ಷಣದೊಂದಿಗೆ ತೀವ್ರವಾದ ಉಸಿರಾಟ ತೊಂದರೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಈಗ 369ಕ್ಕೇರಿದೆ.

ಇಂದು ಪಾಸಿಟಿವ್ ಬಂದ 188 ಮಂದಿಯಲ್ಲಿ 96 ಮಂದಿ ಪುರುಷರು ಹಾಗೂ 92 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 90, ಕುಂದಾಪುರ ತಾಲೂಕಿನ 47 ಹಾಗೂ ಕಾರ್ಕಳ ತಾಲೂಕಿನ 47 ಮಂದಿ ಇದ್ದು, ಉಳಿದ ನಾಲ್ವರು ಹೊರಜಿಲ್ಲೆಯವರು. ಇವರಲ್ಲಿ 14 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 174 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ನಿನ್ನೆ ಒಟ್ಟು 330 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 62,800ಕ್ಕೇರಿದೆ. ಗುರುವಾರ ಜಿಲ್ಲೆಯಲ್ಲಿ 3473 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 65,016 ಆಗಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,49,783 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಡಿಸಲಾಗಿದೆ.

ಶುಕ್ರವಾರವೂ ಜಿಲ್ಲೆಯಲ್ಲಿ ಕಪ್ಪು ಶಿಲೀಂದ್ರ ಸೋಂಕಿನ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಒಟ್ಟು ಆರು ಮಂದಿ ಮಣಿಪಾಲ ಕೆಎಂಸಿ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

3,408 ಮಂದಿ ಲಸಿಕೆ ಸ್ವೀಕಾರ

ಇಂದು ಜಿಲ್ಲೆಯಲ್ಲಿ 3,408 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಇವರಲ್ಲಿ 2877 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 531 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 2598 ಮಂದಿ ಮೊದಲ ಡೋಸ್‌ನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 262 ಮಂದಿ ಮೊದಲ ಡೋಸ್ ಹಾಗೂ 483 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 51 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 14 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 3,31,798 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 94,225 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News