ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ

Update: 2021-06-19 10:38 GMT

ಬೆಂಗಳೂರು, ಜೂ.19: ಭದ್ರಾ ಮೇಲ್ದಂಡೆ ಕಾಮಗಾರಿಯ ರೂ. 20,000 ಕೋಟಿ ಟೆಂಡರ್ ನಲ್ಲಿ ಬಿ.ಎಸ್.ವಿಜಯೇಂದ್ರ ಶೇಕಡಾ ಹತ್ತರಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಆರೋಪವನ್ನು ಭ್ರಷ್ಟಾಚಾರ ನಿರೋಧ ದಳ (ಎಸಿಬಿ)ದ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ ನೇರವಾಗಿ ಮುಖ್ಯಮಂತ್ರಿಯ ಮಗನ ಮೇಲೆ ಮಾಡಲಾಗಿದೆ, ಎರಡನೆಯದಾಗಿ ಆಡಳಿತ ಪಕ್ಷದ ವಿಧಾನ ಪರಿಷತ್ ಸದಸ್ಯರೇ ಈ ಆರೋಪ ಮಾಡಿದ್ದಾರೆ. ತರಾತುರಿಯಲ್ಲಿ ನೀರಾವರಿ ಇಲಾಖೆ ಸ್ಪಷ್ಟನೆ ನೀಡಿದ್ದನ್ನು ನೋಡಿದರೆ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಸ್ಪಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಗರದ ಬಿಐಇಸಿಯಲ್ಲಿ ನಿರ್ಮಿಸಲಾಗಿದ್ದ ಕೋವಿಡ್ ಕೇರ್ ಸೆಂಟರ್ ನ ಹಾಸಿಗೆ ಮತ್ತು ಬೆಡ್ ಗಳ ಖರೀದಿ-ಮಾರಾಟದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಭ್ರಷ್ಟಾಚಾರ ಎಸಗಿದ್ದಾರೆ ಮತ್ತು ಭೂಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಎಚ್.ವಿಶ್ವನಾಥ್ ಅವರ ಇನ್ನೊಂದು ಆರೋಪದ ಬಗ್ಗೆಯೂ ತನಿಖೆ ನಡೆಯಬೇಕು.

ಆಡಳಿತ ಪಕ್ಷದ ಶಾಸಕರು ಮತ್ತು ಈಗಿನ ಬಿಜೆಪಿ ಸರ್ಕಾರದ ರೂವಾರಿಯೇ ತಾನೆಂದು ಹೇಳಿಕೊಳ್ಳುತ್ತಿರುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರೇ ಈ ಸರ್ಕಾರವನ್ನು ‘ಗುತ್ತಿಗೆದಾರರ ಸರ್ಕಾರ’ಎಂದು ಬಣ್ಣಿಸಿರುವುದು ನೋಡಿದರೆ ಅವರ ಬಳಿ ಬೇರೆ ಸಚಿವರ ಭ್ರಷ್ಟಾಚಾರದ ಮಾಹಿತಿಯೂ ಇದ್ದ ಹಾಗಿದೆ. ಎಸಿಬಿ ಅವರನ್ನೂ ಕರೆದು ವಿಚಾರಣೆಗೆ ಒಳಪಡಿಸಿದರೆ ಸತ್ಯ ಬಯಲಿಗೆ ಬರಬಹುದು ಮಾಜಿ ಮುಖ್ಯಮಂತ್ರಿ ಅಭಿಪ್ರಾಯಿಸಿದರು.

ಮುಖ್ಯಮಂತ್ರಿ ಮತ್ತು ಅವರ ಮಗನ ವಿರುದ್ಧದ ಆರೋಪ ಇದೇ ಮೊದಲ ಬಾರಿ ಕೇಳಿಬಂದದ್ದಲ್ಲ, ಇನ್ನೊಬ್ಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ಒಂದು ವರ್ಷದಿಂದ ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುತ್ತಾ ಬಂದಿದ್ದಾರೆ. ಇತ್ತೀಚೆಗೆ ಇನ್ನೊಬ್ಬ ಶಾಸಕ ಸಿ.ಪಿ.ಯೋಗೀಶ್ವರ್ ಅವರೂ ಇದಕ್ಕೆ ದನಿಗೂಡಿಸಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಯಬೇಕು.

ಮುಖ್ಯಮಂತ್ರಿ  ಮತ್ತು ಅವರ ಮಗನ ವಿರುದ್ಧ ಈ ರೀತಿ ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಶಾಸಕರ ವಿರುದ್ಧ ಯಾವುದೇ ಶಿಸ್ತಿನ ಕ್ರಮ ಕೈಗೊಳ್ಳದೆ ಅವರಿಗೆ ಇನ್ನಷ್ಟು ಅವಕಾಶ ನೀಡುತ್ತಿರುವುದನ್ನು ನೋಡಿದರೆ ಒಂದೋ ಬಿಜೆಪಿಯ ಹೈಕಮಾಂಡ್ ಈ ಆರೋಪಗಳನ್ನು ಒಪ್ಪಿಕೊಂಡಿದೆ, ಇಲ್ಲವೇ ಭ್ರಷ್ಟಾಚಾರದ ಹೇಸಿಗೆಯಲ್ಲಿ ಅದೂ ಕೂಡಾ ಪಾಲು ಪಡೆದಿದೆ ಎಂದೇ ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯದ ಆಡಳಿತ ಪಕ್ಷದೊಳಗೆ ಭುಗಿಲೆದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಪ್ರತಿನಿಧಿಯಾಗಿ ಬಂದಿದ್ದ ಅರುಣ್ ಸಿಂಗ್ ಎಂಬ ಬಡಪಾಯಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ಎಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ಧ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ.. ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News