ಶಾಸಕ ಅರವಿಂದ್ ಬೆಲ್ಲದ್ ದೂರವಾಣಿ ಕದ್ದಾಲಿಕೆ ಬಗ್ಗೆ ತನಿಖೆ ನಡೆಯುತ್ತಿದೆ: ಗೃಹ ಸಚಿವ ಬೊಮ್ಮಾಯಿ

Update: 2021-06-19 12:05 GMT

ಬೆಂಗಳೂರು, ಜೂ.19: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರ ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೂರವಾಣಿ ಕದ್ದಾಲಿಕೆ ಬಗ್ಗೆ ಈಗಾಗಲೇ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ, ತನಿಖೆ ಪ್ರಗತಿಯಲ್ಲಿರುವಾಗ ಈ ಬಗ್ಗೆ ಹೆಚ್ಚು ಮಾತನಾಡುವುದು ಸಮಂಜಸವಲ್ಲ ಎಂದರು.

ಇನ್ನು, ಮೇಕೆದಾಟು ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಆರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಾಗಲೇ ಹೇಳಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತೀರ್ಪಿನಿಂದ ರಾಜ್ಯ ಸರಕಾರಕ್ಕೆ ಹೆಚ್ಚಿನ ಬಲ ಬಂದಿದೆ. ಮೇಕೆದಾಟು ಯೋಜನೆಯಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂಬುದು ನ್ಯಾಯಾಲಯದ ಆದೇಶದಿಂದ ಸ್ಪಷ್ಟವಾಗಿದೆ ಎಂದು ವಿವರಿಸಿದರು.

ರಾಜ್ಯದೆಲ್ಲೆಡೆ ಕೋವಿಡ್ ಎರಡನೆ ಅಲೆ ತಗ್ಗಿರುವ ಕಾರಣದಿಂದಾಗಿ ನಾಳೆ(ಜೂ.21) ಅನ್‍ಲಾಕ್ ಮಾಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ನಡೆಸಿ ಯಾವೆಲ್ಲ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಹುದು ಎಂಬ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News