ಕೇಂದ್ರದ ಅನುಮತಿ ಪಡೆದು ಶೀಘ್ರವೇ ‘ಮೇಕೆದಾಟು’ ಯೋಜನೆ ಜಾರಿಗೊಳಿಸಿ: ಕುಮಾರಸ್ವಾಮಿ

Update: 2021-06-19 16:17 GMT

ಬೆಂಗಳೂರು, ಜೂ.19: ಮೇಕೆದಾಟು ಯೋಜನೆ ವಿಚಾರವಾಗಿ ಎನ್‍ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರಕಾರ ಗಮನಹರಿಸಬೇಕು. ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಸರಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರಕಾರ ಇನ್ನು ನಿರ್ಲಕ್ಷ್ಯ ತೋರಬಾರದು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೇಂದ್ರದ ಅನುಮತಿ ಸಿಕ್ಕ ಕೂಡಲೇ ಯೋಜನೆ ಆರಂಭಿಸುವ ಯಡಿಯೂರಪ್ಪ ಹೇಳಿಕೆಯನ್ನು ಸೋದರ ಎಂ.ಕೆ.ಸ್ಟಾಲಿನ್ ವಿರೋಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿರುವ ಪ್ರಕರಣವೊಂದರಲ್ಲಿ ಕರ್ನಾಟಕ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂಬುದು ಅವರ ಆರೋಪ. ವಿಚಾರಣೆಯಾಗುತ್ತಿರುವ ಯೋಜನೆಯೊಂದಕ್ಕೆ ತಡೆ ತರಲು ಪ್ರಧಾನಿಯನ್ನು ಭೇಟಿಯಾಗಿದ್ದೂ ತಪ್ಪಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಹೊಗೇನಕಲ್ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ತಮಿಳುನಾಡು ಯಾವ ರೀತಿ ನಡೆದುಕೊಂಡಿತು ಎಂದು ನಾನು ಹೇಳಬೇಕಿಲ್ಲ. ಆ ಯೋಜನೆ ಆಗಿದ್ದು ಎಂ.ಕೆ.ಸ್ಟಾಲಿನ್ ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲೇ. ಕುಡಿಯುವ ನೀರಿನ ನೆಪವೊಡ್ಡಿ ತಮಿಳುನಾಡು ಕರ್ನಾಟಕದ ಗಡಿ ದಾಟಿ ಬಂದಿತ್ತು. ಸಮರ್ಥನೆಯನ್ನೂ ಮಾಡಿಕೊಂಡಿತ್ತು. ಮೇಕೆದಾಟು ಕೂಡ ಕುಡಿಯುವ ನೀರಿನ ಯೋಜನೆಯೇ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಮೇಕೆದಾಟು ಯೋಜನೆಯನ್ನು ಯಾವ ಕೋನದಲ್ಲಿ ನೋಡಿದರೂ ಅದು ನ್ಯಾಯವಾಗೇ ಕಾಣುತ್ತದೆ. ಹೀಗಾಗಿ ವಿವಾದ ಅನಗತ್ಯ. ಕಾವೇರಿಗಾಗಿ ಕಲಹ ನಡೆದದ್ದು ಸಾಕು. ಈಗ ನಾವು ಸೋದರತೆ ಮೆರೆಯಬೇಕಾದ ಅನಿವಾರ್ಯತೆ ಇದೆ ಎಂಬುದನ್ನು ಸೋದರ ಎಂ.ಕೆ.ಸ್ಟಾಲಿನ್ ಅವರಿಗೆ ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ಅನಗತ್ಯ ಕಲಹದಲ್ಲಿ, ಅದೂ ಈ ಹೊತ್ತಲ್ಲಿ ನಾವು ಒಡೆದುಹೋಗಬಾರದು ಎಂದು ಅವರು ಕಿವಿಮಾತು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News