ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕರ್ನಾಟಕ-ಮಹಾರಾಷ್ಟ್ರ ಜಂಟಿ ಪ್ರಯತ್ನ; ಮುಖ್ಯಮಂತ್ರಿ ಯಡಿಯೂರಪ್ಪ

Update: 2021-06-19 17:31 GMT

ಬೆಂಗಳೂರು, ಜೂ.19: ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಎದುರಾಗುವಂತಹ ಪ್ರವಾಹ ಪರಿಸ್ಥಿತಿಯನ್ನು ಕರ್ನಾಟಕ ಹಾಗೂ ಮಹಾರಾಷ್ಟ್ರ ಸರಕಾರಗಳು ಜಂಟಿಯಾಗಿ ನಿರ್ವಹಣೆ ಮಾಡುವ ಸಂಬಂಧ ಫಲಪ್ರದವಾಗಿ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ‘ಕೃಷ್ಣಾ ಹಾಗೂ ಭೀಮಾ ಕಣಿವೆ ಪಾತ್ರದಡಿ ಸಮರ್ಪಕ ನಿಯಂತ್ರಣ ಹಾಗೂ ನಿರ್ವಹಣೆ’ಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗಿನ ಸಭೆಯ ಬಳಿಕ ಅವರು ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆ ನಡೆಸಿ, ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆಯ ಕುರಿತ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದರು.

ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ ತಳಹಂತದ ಅಧಿಕಾರಿಗಳ ನಡುವೆ ಉತ್ತಮ ಸಂವಹನ, ಸಮನ್ವಯ ನಿರ್ವಹಿಸಲು ತೀರ್ಮಾನಿಸಲಾಗಿದೆ. ಎರಡೂ ರಾಜ್ಯಗಳ ನಡುವೆ ಮಳೆಯ ಪ್ರಮಾಣ, ಜಲಾಶಯಗಳಿಂದ ನೀರು ಬಿಡುಗಡೆ ಕುರಿತಂತೆ ಕ್ಷಣ ಕ್ಷಣದ ಮಾಹಿತಿ ಹಂಚಿಕೊಳ್ಳಲು ತೀರ್ಮಾನಿಸಲಾಯಿತು ಎಂದು ಯಡಿಯೂರಪ್ಪ ಹೇಳಿದರು.

ದೂಧ್ ಗಂಗಾ ಯೋಜನೆಯನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸುವುದಾಗಿ ಮಹಾರಾಷ್ಟ್ರ ಸರಕಾರ ಒಪ್ಪಿಕೊಂಡಿದೆ. ಇದರಿಂದ ಈ ಭಾಗದ ಜನರ ನೀರಾವರಿ ಸೌಲಭ್ಯ ಹೊಂದುವ ಆಕಾಂಕ್ಷೆ ನೆರವೇರಲಿದೆ. ಇದರೊಂದಿಗೆ ಬೇಸಿಗೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 4 ಟಿಎಂಸಿ ನೀರು ಹಾಗೂ ಮಳೆಗಾಲದಲ್ಲಿ ಮಹಾರಾಷ್ಟ್ರಕ್ಕೆ ರಾಜ್ಯದಿಂದ ಅಷ್ಟೇ ಪ್ರಮಾಣದ ನೀರು ಒದಗಿಸುವ ಬಗ್ಗೆ ತಾಂತ್ರಿಕ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿ ತಿಳಿಸಿದರು.

ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಮಾತನಾಡಿ, 2019ರಲ್ಲಿ ಸಂಭವಿಸಿದ ಪ್ರವಾಹ ಎರಡು ರಾಜ್ಯಗಳನ್ನು ಕಂಗೆಡಿಸಿತ್ತು. ಈ ಹಿನ್ನೆಲೆಯಲ್ಲಿ 2020ರಲ್ಲಿ ಎರಡು ರಾಜ್ಯಗಳು ಪರಸ್ಪರ ಸಮನ್ವಯತೆ ಸಾಧಿಸಿದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಯಿತು ಎಂದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರಕಾರಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News