ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಚರ್ಚೆ ಆಗುತ್ತಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Update: 2021-06-21 12:54 GMT

ಕೊಪ್ಪಳ, ಜೂ. 21: `ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗುತ್ತಿಲ್ಲ. ಬದಲಿಗೆ ಕೆಲ ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಬಳಿಕ ಹೈಕಮಾಂಡ್ ಶಾಸಕರ ಅಭಿಪ್ರಾಯವನ್ನು ಆಲಿಸಿ ತೀರ್ಮಾನ ಮಾಡುತ್ತದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಬಸಾಪುರ ಬಳಿಯ ಖಾಸಗಿ ಏರ್ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಮುಂದಿನ ಮುಖ್ಯಮಂತ್ರಿ ಕುರಿತು ನಮ್ಮ ಪಕ್ಷದ ಕೆಲ ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಕೆಲ ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ ತಕ್ಷಣ ಅದು ಪಕ್ಷದ ಅಭಿಪ್ರಾಯವಲ್ಲ. ಇದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ' ಎಂದು ತಿಳಿಸಿದರು.

`ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರ ಫೋನ್ ಕದ್ದಾಲಿಕೆ ಪ್ರಕರಣ ತನಿಖೆಯಾಗಬೇಕು. ಈ ಬಗ್ಗೆ ನಾನು ತನಿಖೆಗೆ ಒತ್ತಾಯ ಮಾಡಿದ್ದೇನೆ. ಇನ್ನೊಬ್ಬರ ಫೋನ್ ಕದ್ದಾಲಿಕೆ ಮಾಡುವ ಅಧಿಕಾರ ಸರಕಾರಕ್ಕಾಗಲಿ ಅಥವಾ ಪೊಲೀಸರಿಗಾಗಲಿ ಇಲ್ಲ. ಈ ಹಿಂದೆ ರಾಮಕೃಷ್ಣ ಹೆಗಡೆ ಆಡಳಿತಾವಧಿಯಲ್ಲಿ ಏನಾಗಿದೆ ಗೊತ್ತಿದೆ. ಇದು ಅತ್ಯಂತ ಗಂಭೀರವಾದ ವಿಚಾರ' ಎಂದು ಸಿದ್ದರಾಮಯ್ಯ ತನಿಖೆಗೆ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News