ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಅಧಿಕಾರಿಗಳಿಂದ ಕಾನೂನುಬಾಹಿರ ಹಸ್ತಕ್ಷೇಪ: ಲೋಕೇಶ್ ತಾಳಿಕಟ್ಟೆ

Update: 2021-06-21 13:16 GMT

ಬೆಂಗಳೂರು, ಜೂ.21: ಖಾಸಗಿ ಶಾಲೆಗಳ ಶುಲ್ಕ ವಿಚಾರದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು ಬಾಹಿರ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಖಾಸಗಿ ವಿದ್ಯಾಸಂಸ್ಥೆಗಳು ತಮ್ಮಲ್ಲಿ ದಾಖಲಾಗುವ ಪ್ರತಿ ಮಗುವಿಗೂ ಶುಲ್ಕವನ್ನು ವಿಧಿಸುವ ಮತ್ತು ಪಡೆಯುವ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಆದರೂ ವಿನಾಕಾರಣ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು ಬಾಹಿರ ಹಸ್ತಕ್ಷೇಪ ಮುಂದುವರಿಸಿದ್ದಾರೆಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಶಾಲಾ ಶುಲ್ಕ ಕಟ್ಟದಿದ್ದರೂ ದಾಖಲಾತಿ ಮಾಡಿಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಒತ್ತಡ ಹಾಕುತ್ತಿರುವುದು ದುರಾದೃಷ್ಟಕರ. ಅಧಿಕಾರಿಗಳ ಈ ನಡುವಳಿಕೆ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾದುದಾಗಿದೆ ಎಂದು ಅವರು ತಿಳಿಸಿದ್ದಾರೆ.

2021-22ರ ಸಾಲಿನ ವಿದ್ಯಾರ್ಥಿಗಳ ದಾಖಲಾತಿಗೆ ಪೋಷಕರು ತಮ್ಮ ಮಕ್ಕಳ ದಾಖಲಾತಿಗೆ ಅನುಮತಿ ನೀಡದಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗಳು ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಎಸ್‍ಎಟಿಎಸ್‍ನಲ್ಲಿ ಅಪ್ಲೋಡ್ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಈಗಾಗಲೇ ಸಂಕಷ್ಟದಲ್ಲಿರುವ ಶಾಲೆಗಳಿಗೆ ಅಧಿಕಾರಿಗಳು ಮತ್ತಷ್ಟು ಆಘಾತವನ್ನು ಉಂಟು ಮಾಡುತ್ತಿದ್ದಾರೆಂದು ಅವರು ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News