ಬಲಾಯಿಪಾದೆಯಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸಿ: ಉಡುಪಿ ಜಿಲ್ಲಾಧಿಕಾರಿ ಸೂಚನೆ

Update: 2021-06-22 14:02 GMT

ಉಡುಪಿ, ಜೂ.22: ಉದ್ಯಾವರ ಬಳಿ ರಾಷ್ಟ್ರೀಯ ಹೆದ್ದಾರಿ ಬಲಾಯಿಪಾದೆ ಜಂಕ್ಷನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ಇಲ್ಲಿ ಸ್ಥಳೀಯ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಆದಷ್ಟು ಶೀಘ್ರದಲ್ಲಿ ಸರ್ವಿಸ್ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಲಾಯಿಪಾದೆ ಜಂಕ್ಷನ್ ಬಳಿ ಸರ್ವಿಸ್ ರಸ್ತೆ ನಿರ್ಮಾಣದ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉಡುಪಿಯಿಂದ ಬಲಾಯಿಪಾದೆ ಹಾಗೂ ಉದ್ಯಾವರಕ್ಕೆ ತೆರಳುವ ಮಾರ್ಗದಲ್ಲಿ ಸರ್ವಿಸ್ ರಸ್ತೆ ಇಲ್ಲದ ಕಾರಣ, ಇಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುವುದರ ಜೊತೆಗೆ ವಾಹನ ಸವಾರರು ರಾಂಗ್‌ರೂಟ್ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಚರಿಸುತ್ತಿದ್ದು, ಇದರಿಂದ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭಸುತ್ತಿವೆ. ಅಪಘಾತಗಳು ತಡೆಯುವ ನಿಟ್ಟಿನಲ್ಲಿ ಈ ಭಾಗದಲ್ಲಿ ಅತೀ ಶೀಘ್ರವಾಗಿ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಬೆೀಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕರಾವಳಿ ಜಂಕ್ಷನ್, ಕಟಪಾಡಿ ಹಾಗೂ ಅಂಬಾಗಿಲು-ಸಂತೆಕಟ್ಟೆ ಜಂಕ್ಷನ್ ಗಳಲ್ಲಿ ಸಹ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಈ ಜಂಕ್ಷನ್‌ಗಳಲ್ಲಿ ಅರ್ಧಕ್ಕೆ ನಿಲ್ಲಿಸಿದ ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸುವಂತೆ ಎನ್.ಹೆಚ್. ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಮಳೆಯ ಕಾರಣದಿಂದ ಕುಂದಾಪುರ ಶಾಸ್ತ್ರೀ ಸರ್ಕಲ್, ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜು ಹಾಗೂ ಮಹೇಶ್ ಹಾಸ್ಪಿಟಲ್ ಬಳಿ ಮತ್ತು ಬಾರಕೂರು ಕ್ರಾಸ್‌ಗಳಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿದ ಪರಿಣಾಮ, ಈ ಪ್ರದೇಶದಲ್ಲಿ ಅನೇಕ ಅಪಘಾತಗಳು ಸಂಭಸುತ್ತಿವೆ. ಹೀಗಾಗಿ ಇಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ದಾರಿದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವುದರಿಂದ ಹೆಚ್ಚು ಅಪಘಾತಗಳು ಸಂಭಸುತ್ತಿವೆ. ಇಲ್ಲಿ ಆದಷ್ಟು ಶೀಘ್ರವಾಗಿ ಈ ಸ್ಟ್ರೀಟ್‌ಲೈಟ್‌ಗಳನ್ನು ದುರಸ್ಥಿ ಮಾಡುವಂತೆ ಹಾಗೂ ಅಪೂರ್ಣಗೊಂಡ ಪಡುಬಿದ್ರೆ ಸರ್ವಿಸ್ ರಸ್ತೆ ಕಾಮಗಾರಿಗಳನ್ನು ತಕ್ಷಣವೇ ಕೈಗೊಂಡು ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಮುಕ್ತಾಯಗೊಳಿಸು ವಂತೆಯೂ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸಬಹುದಾದ ಹೊಸ ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿ, ಅವುಗಳ ವಿವರಗಳನ್ನು ಹೆದ್ದಾರಿ ಇಲಾಖೆಗೆ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿ, ಈ ಪ್ರದೇಶಗಳ ಜಂಟಿಸ್ಥಳ ಪರಿಶೀಲನೆ ಮಾಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್‌ಪಿ ಕುಮಾರಚಂದ್ರ, ಕುಂದಾಪುರ ಸಹಾಯಕ ಕಮಿಷನರ್ ಕೆ.ರಾಜು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶುಮೋಹನ್ ಅರುಣ್, ಎನ್.ಹೆಚ್.ಎ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News