ಉಡುಪಿ: ಎರಡಂಕಿಗೆ ಇಳಿದ ಕೊರೋನ ಪಾಸಿಟಿವ್ ಪ್ರಕರಣ, 219 ಮಂದಿ ಗುಣಮುಖ

Update: 2021-06-22 14:38 GMT
ಸಾಂದರ್ಭಿಕ ಚಿತ್ರ

ಉಡುಪಿ, ಜೂ.22: ಸೋಮವಾರವಷ್ಟೇ ಲಾಕ್‌ಡೌನ್ ನಿರ್ಬಂಧದಿಂದ ಹೊರಬಂದ ಉಡುಪಿ ಜಿಲ್ಲೆಯಲ್ಲಿ ಇಂದು ಕೊರೋನ ಪಾಸಿಟಿವ್ ಸಂಖ್ಯೆ ಎರಡಂಕಿಗೆ ಇಳಿದಿದ್ದು, ಮಂಗಳವಾರ 79 ಮಂದಿಯಲ್ಲಿ ಮಾತ್ರ ಕೋವಿಡ್ ಸೋಂಕು ಪತ್ತೆಯಾಗಿದೆ. ದಿನದಲ್ಲಿ ಇಬ್ಬರು ಸೋಂಕಿಗೆ ಬಲಿಯಾದರೆ, 219 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1,520ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲೆಯಲ್ಲಿ ಇಬ್ಬರು ಹಿರಿಯ ನಾಗರಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 375ಕ್ಕೇರಿದೆ. ಕುಂದಾಪುರ ತಾಲೂಕಿನ 67 ಹಾಗೂ ಉಡುಪಿ ತಾಲೂಕಿನ 75 ಪ್ರಾಯದ ವೃದ್ಧರು ಮೃತಪಟ್ಟಿದ್ದಾರೆ. ಇಬ್ಬರು ಸಹ ತೀವ್ರ ಕೋವಿಡ್ ಗುಣಲಕ್ಷಣದೊಂದಿಗೆ ಉಸಿರಾಟದ ತೊಂದರೆ ಹಾಗೂ ಇತರ ಸಮಸ್ಯೆಗಳಿಗಾಗಿ ಜೂ.13 ಮತ್ತು 10ಕ್ಕೆ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಾದವರು ಸೋಮವಾರ ಮೃತಪಟ್ಟಿದ್ದಾರೆ.

ಇಂದು ಪಾಸಿಟಿವ್ ಬಂದ 79 ಮಂದಿಯಲ್ಲಿ 34 ಮಂದಿ ಪುರುಷರು ಹಾಗೂ 45 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 29, ಕುಂದಾಪುರ ತಾಲೂಕಿನ 29 ಹಾಗೂ ಕಾರ್ಕಳ ತಾಲೂಕಿನ 20 ಮಂದಿ ಒಬ್ಬರು ಮಾತ್ರ ಹೊರಜಿಲ್ಲೆಯಿಂದ ಬಂದವರು. ಇವರಲ್ಲಿ 8 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 71 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ 219 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 63,656ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3027 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 65,551 ಆಗಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,61,579 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಮಂಗಳವಾರ ಕಪ್ಪು ಶಿಲೀಂದ್ರ ಸೋಂಕು ಹೊಸದಾಗಿ ಯಾರಲ್ಲೂ ಕಾಣಿಸಿಕೊಂಡಿಲ್ಲ. ಸದ್ಯ ನಾಲ್ವರು ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ.

9,466 ಮಂದಿಗೆ ಕೋವಿಡ್ ಲಸಿಕೆ
ಇಂದು ಜಿಲ್ಲೆಯಲ್ಲಿ ಒಟ್ಟು 9,466 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಇವರಲ್ಲಿ 8,580 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 886 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 3,631 ಮಂದಿ ಮೊದಲ ಡೋಸ್‌ನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 4,936 ಮಂದಿ ಮೊದಲ ಡೋಸ್ ಹಾಗೂ 866 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 32 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ ಒಬ್ಬ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 3,68,975 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 99,330 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News