ದ.ಕ. ಜಿಲ್ಲೆಯಲ್ಲಿ ಸರಕಾರಿ-ಖಾಸಗಿ ಬಸ್‌ಗಳ ಸಂಚಾರಕ್ಕೆ ಅನುಮತಿ: ಜಿಲ್ಲಾಧಿಕಾರಿ

Update: 2021-06-22 16:09 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜೂ. 22: ದ.ಕ. ಜಿಲ್ಲೆಯಲ್ಲಿ ಬುಧವಾರದಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದರೆ, ಸದ್ಯ ನಾವು ಬಸ್‌ಗಳನ್ನು ಸಂಚಾರ ಮಾಡಿಸುವ ಸ್ಥಿತಿಯಲ್ಲಿಲ್ಲ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ಸ್ಪಷ್ಪಪಡಿಸಿದ್ದಾರೆ.

ಜಿಲ್ಲಾದ್ಯಂತ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವಾರಾಂತ್ಯ ಕರ್ಫ್ಯೂ ಇದೆ. ಈ ದಿನವನ್ನು ಹೊರತುಪಡಿಸಿ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಖಾಸಗಿ- ಸರಕಾರಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬಹುದಾಗಿದೆ. ನಿಂತು ಪ್ರಯಾಣಿಸಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ 'ನಮ್ಮ ಬೇಡಿಕೆಯನ್ನು ಸರಕಾರ ಅಥವಾ ಜಿಲ್ಲಾಡಳಿತ ಪರಿಗಣಿಸಿಲ್ಲ. ನಾವು ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಆ ಬಗ್ಗೆಯೂ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಕನಿಷ್ಠ ಬಸ್ ಮಾಲಕರ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸುವ ಸೌಜನ್ಯವನ್ನೂ ತೋರಿಲ್ಲ. ಶೇ.50ರಷ್ಟು ಪ್ರಯಾಣಿಕರನ್ನು ಕರೆದೊಯ್ದು ಬಸ್ ಸಂಚಾರ ಮಾಡಲು ಸದ್ಯದ ಸ್ಥಿತಿಯಲ್ಲಿ ನಮಗೆ ಸಾಧ್ಯವಿಲ್ಲ. ಒಂದೆರೆಡು ದಿನದಲ್ಲಿ ಸಂಘದ ಸಭೆ ಕರೆದು ಚರ್ಚಿಸಲಾಗುವುದು. ಏನಿದ್ದರೂ ಜು.1ರಿಂದ ಬಸ್ ಸಂಚಾರ ಮಾಡುವ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News