ವಕ್ಫ್ ಆಸ್ತಿ ಕಬಳಿಕೆ ಕುರಿತಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಗೆ ಹೈಕೋರ್ಟ್ ನಿರ್ದೇಶನ

Update: 2021-06-22 16:35 GMT

ಬೆಂಗಳೂರು, ಜೂ.22: ಕೋಟ್ಯಂತರ ರೂ. ಬೆಲೆಬಾಳುವ ವಕ್ಫ್ ಆಸ್ತಿ ಕಬಳಿಕೆ ಕುರಿತಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಕಲಬುರಗಿಯ ಮಾಜಿ ಸಚಿವ ಎಸ್.ಕೆ.ಕಾಂತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರಕಾರಕ್ಕೆ ಈ ನಿರ್ದೇಶನ ನೀಡಿತು.

ರಾಜ್ಯ ಅಲ್ಪಸಂಖ್ಯಾತರ ಆಯೋಗದ ವರದಿಯನ್ನು ಶಾಸನ ಸಭೆಯ ಉಭಯ ಸದನಗಳಲ್ಲಿ ಮಂಡಿಸಲಾಗಿದೆಯೇ? 2016ರಲ್ಲಿ ಸಲ್ಲಿಸಿದ ಲೋಕಾಯುಕ್ತ ವರದಿಯಂತೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ವಿವರ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನ್ಯಾಯಪೀಠವು ನಿರ್ದೇಶನ ನೀಡಿತು.

ಅರ್ಜಿಯಲ್ಲಿ ಏನಿದೆ: ಕೋಟ್ಯಂತರ ರೂ.ಮೌಲ್ಯದ ವಕ್ಫ್ ಆಸ್ತಿ ದುರ್ಬಳಕೆ ಬಗ್ಗೆ ವರದಿ ನೀಡಿ ಹಲವು ವರ್ಷಗಳಾದರೂ ಇನ್ನೂ ಸರಕಾರ ವರದಿಯನ್ನು ಬಹಿರಂಗಪಡಿಸುತ್ತಿಲ್ಲ. ಕಾನೂನು ಪ್ರಕಾರ ಅದನ್ನು ಸದನದ ಮುಂದೆ ಇಡುತ್ತಿಲ್ಲ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದೆ, ತಟಸ್ಥ ನಿಲುವು ಪ್ರದರ್ಶಿಸುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅನ್ವರ್ ಮಾಣಿಪ್ಪಾಡಿ 2012ರಲ್ಲಿ ವಕ್ಫ್ ಮಂಡಳಿಗೆ ಸೇರಿದ 27 ಸಾವಿರ ಕೋಟಿ ಆಸ್ತಿ ದುರ್ಬಳಕೆ ಆಗಿದೆ ಎಂದು ಸರಕಾರಕ್ಕೆ ವರದಿ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News