ಮುಡಿಪು: ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ವಿತರಣೆ
ಕೊಣಾಜೆ : ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ಈ ದೇಶ ಬಲಿಷ್ಠವಾಗುತ್ತದೆ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡುತ್ತಿದ್ದು ಶಿಕ್ಷಣಕ್ಕೆ ಆದ್ಯತೆ ನೀಡುವುದೇ ಮುಖ್ಯ ಗುರಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ಅವರು ಬುಧವಾರ ಕುರ್ನಾಡು ಮುಡಿಪಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ.ಸಿ. ವಿತರಿಸಿ ಮಾತನಾಡಿದರು.
ಯಾವುದೇ ಅಭಿವೃದ್ಧಿಯಲ್ಲಿ ಕನಿಷ್ಟ ಮುಂದಿನ ಮುವತ್ತು ವರ್ಷಗಳ ದೂರದೃಷ್ಟಿ ಇದೆ. ಇಲ್ಲಿ ಸುಂದರ ಪರಿಸರ, ಸುಂದರ ಕಟ್ಟಡ, ನುರಿತ ಉಪನ್ಯಾಸಕರು, ಸಿಬ್ಬಂದಿ ಎಲ್ಲ ಸೌಲಭ್ಯಗಳಿಂದ ಸುಸಜ್ಜಿತವಾಗಿದ್ದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಮುಂದೆ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಪೂರಕವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ ವಿದ್ಯಾರ್ಥಿಗಳಿಗೆ ಬಹಳಷ್ಟು ಸೌಲಭ್ಯಗಳು ದೊರಕಿದ್ದು ವಿದ್ಯಾರ್ಥಿಗಳು ಸರ್ವಾಂಗೀಣ ಯಶಸ್ಸು ಕಾಣಬೇಕು ಎಂದು ನುಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕಾಲೇಜಿನ ಐಟಿ ಸಂಚಾಲಕ ಅಜಯ್, ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಿನ್ಸಿಪಾಲ್ ಗಿರಿಧರ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ ಮುಡಿಪು ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡದ ಜೊತೆಗೆ ಸ್ಮಾರ್ಟ್ ಕ್ಲಾಸ್ ಯೋಜನೆಯಡಿಯಲ್ಲಿ ಮೂರು ತರಗತಿ ನಡೆಸಿ ಕೊಡಲು ಹಾಗೂ ಪ್ರಥಮ ಪದವಿಯ 93 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ದೊರಕಿಸಿಕೊಟ್ಟಿರುವುದು ಶ್ಲಾಘನೀಯ. ಕೆಲವು ವರ್ಷದ ಹಿಂದೆ ಒಂದು ತರಗತಿಯಲ್ಲಿದ್ದ ಕೆಲವು ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಟ್ಯಾಬ್ಲೆಟ್ ಪಿ.ಸಿ. ಸಿಗುತ್ತಿದ್ದು ಈಗ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ದೊರಕಿರುವುದು ತುಂಬ ಖುಷಿ ಕೊಟ್ಟಿದೆ ಎಂದು ಹೇಳಿದರು. ಸಹಾಯಕ ಪ್ರಾಧ್ಯಾಪಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.
ಮುಡಿಪು ಕಾಲೇಜು ಎಲ್ಲ ವಿಭಾಗದಲ್ಲಿ ಉನ್ನತ ಸ್ಥಾನದಲ್ಲಿದೆ. ಮೂಲಭೂತ ಸೌಲಭ್ಯಗಳೊಂದಿಗೆ ಕಾಲೇಜಿನ ಹೊಸ ಕಟ್ಟಡ ನಿರ್ಮಾಣಗೊಂಡು ಈ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾಗಿದೆ. ಶಾಲೆಯ ಆವರಣಗೋಡೆಯೂ ಆದಷ್ಟು ಶೀಘ್ರದಲ್ಲಿ ನಿರ್ಮಾಣವಾಗಬೇಕಿದೆ. ಹಾಗೆಯೇ ವಿದ್ಯಾರ್ಥಿಗಳು ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವ ಹೇಳಿದರು.