ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹೊಣೆ ಎಂಟಿಬಿ ನಾಗರಾಜ್‍ ಹೆಗಲಿಗೆ

Update: 2021-06-23 14:19 GMT

ಬೆಂಗಳೂರು, ಜೂ. 23: ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂ.ಟಿ.ಬಿ.ನಾಗರಾಜ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಧೀನ ಕಾರ್ಯದರ್ಶಿ ಮಾಲತಿ ಸಿ. ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರನ್ನು ನಿಯೋಜನೆ ಮಾಡಲಾಗಿತ್ತು. ಎಂ.ಟಿ.ಬಿ.ನಾಗರಾಜ್ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ಹೊಣೆ ನೀಡಲಾಗಿತ್ತು. ಆದರೆ, ನಾಗರಾಜ್ ಅವರು ತನಗೆ ಕೋಲಾರ ಜಿಲ್ಲಾ ಉಸ್ತುವಾರಿ ಸ್ಥಾನ ಬೇಡ ಎಂದು ನಿರಾಕರಿಸಿದ್ದರು. ಅಲ್ಲದೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಹಿನ್ನೆಲೆಯಲ್ಲಿ ಎಂ.ಟಿ.ಬಿ.ನಾಗರಾಜ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.

ತಮ್ಮ ಸಂಪುಟದ ಸಹೋದ್ಯೋಗಿ, ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯನ್ನು ನೀಡಲು ನನ್ನ ಅಭ್ಯಂತರವಿಲ್ಲ ಎಂದು ನಾನು ಈ ಹಿಂದೆ ಸ್ಪಷ್ಟಪಡಿಸಿದ್ದೆ. ಎಂಟಿಬಿ ನಾಗರಾಜ್ ಅವರು ನನ್ನನ್ನು ಭೇಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು. ಹೀಗಾಗಿ ಈ ಕುರಿತು ನನ್ನ ಯಾವುದೇ ತಕರಾರು ಇಲ್ಲ

-ಆರ್.ಅಶೋಕ್, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News