×
Ad

ಕೋವಿಡ್-19 ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸಿ: ಸಚಿವ ಎಸ್.ಅಂಗಾರ

Update: 2021-06-24 16:36 IST

ಚಿಕ್ಕಮಗಳೂರು, ಜೂ.24: ಕೋವಿಡ್-19 ಮೂರನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಸಂಪೂರ್ಣವಾಗಿ ಸಜ್ಜಾಗಬೇಕು ಎಂದು  ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳು ಮತ್ತು ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲೂಕುಗಳಲ್ಲಿ ಕೋವಿಡ್-19 ಪಾಸಿಟಿವ್ ದರ ಅಧಿಕವಾಗಿದ್ದು, ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು. ತಾಲೂಕು ಕೇಂದ್ರಗಳಲ್ಲಿ ಪಾಸಿಟಿವ್ ದರ ಕಡಿಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಹೋಟೆಲ್, ರೆಸ್ಟೋರೆಂಟ್, ಮಾಲ್, ಸೂಪರ್ ಮಾರ್ಕೆಟ್, ಧಾರ್ಮಿಕ ಸ್ಥಳ ಹೀಗೆ ಹೆಚ್ಚು ಜನ ಸೇರುವಂತಹ ವಲಯಗಳನ್ನು ಜಿಲ್ಲೆಯಲ್ಲಿ ಪಾಸಿಟಿವ್ ದರ ಶೇ.5%ರಷ್ಟು ಕಡಿಮೆಯಾಗುವವರೆಗೂ ತೆರೆಯಲು ಅನುಮತಿ ನೀಡಲಾಗುವುದಿಲ್ಲ, ಕ್ಷೌರಿಕರು, ರೀಪೇರಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ನೂತನವಾಗಿ ಆರಂಭವಾಗುತ್ತಿರುವ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋದನಾ ಸಂಸ್ಥೆಯ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಅಂಗಾರ, ಕಾಮಗಾರಿಯು ಪ್ರಗತಿ ಹಂತದಲ್ಲಿರುವುದರಿಂದ ವೈದ್ಯಕೀಯ ಕಾಲೇಜನ್ನು ಪ್ರಾರಂಭ ಮಾಡಲು ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಿ ಎಂದು ಸೂಚಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಜಿಲ್ಲೆಯಲ್ಲಿ ಲಸಿಕೀಕರಣ ಆಂದೋಲನದಲ್ಲಿ ಯಾವುದೇ ತೊಂದರೆಗಳಾಗದಂತೆ ನೋಡಿಕೊಂಡು ಲಸಿಕೆ ನೀಡುವ ಪ್ರಮಾಣವನ್ನು ಹೆಚ್ಚಿಸಬೇಕು. ಇದಕ್ಕೆ ಸಂಬಂಧಿಸಿದಂತಹ ಯಾವುದೇ ಸಮಸ್ಯೆಗಳಿದ್ದರೂ ತನ್ನ ಗಮನಕ್ಕೆ ತರಬೇಕೆಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯಾದರು ಕೂಡ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಬೇಕು, ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು. ಮಾಸ್ಕ್ ಧರಿಸದಿದ್ದಲ್ಲಿ ದಂಡ ವಿಧಿಸಬೇಕು. ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚು ಗಮನಹರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೂರನೇ ಅಲೆಗೆ ಸಂಬಂಧಿಸಿದಂತೆ ತಜ್ಞರೊಂದಿಗೆ ಮಾತನಾಡಿ ಮುಂಜಾಗೃತ ಕ್ರಮಗಳ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಯಾವುದೇ ಆವಶ್ಯಕತೆ ಮತ್ತು ಬೇಡಿಕೆಗಳಿದ್ದಲ್ಲಿ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ  ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಮ್.ಎಚ್ ಅಕ್ಷಯ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News