ಪಶ್ಚಿಮಬಂಗಾಳದ ರಾಜ್ಯಪಾಲರ ವಿರುದ್ಧ ನಿರ್ಣಯ ಅಂಗೀಕರಿಸಲು ಟಿಎಂಸಿ ಚಿಂತನೆ
Update: 2021-06-25 11:25 IST
ಕೋಲ್ಕತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯ ವಿಧಾನಸಭೆಯಲ್ಲಿ ರಾಜ್ಯಪಾಲ ಜಗದೀಪ್ ಧಂಕರ್ ವಿರುದ್ಧ ನಿರ್ಣಯವನ್ನು ಮಂಡಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ರಾಜ್ಯಪಾಲರನ್ನು ತೆಗೆದುಹಾಕುವಂತೆ ಒತ್ತಾಯಿಸಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ ಮತ್ತು ಈ ಕುರಿತು ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬ್ಯಾನರ್ಜಿ ಅವರು ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರೊಂದಿಗೆ ಚರ್ಚಿಸಿದ್ದಾರೆ.
ಜುಲೈ 2 ರಿಂದ ರಾಜ್ಯದಲ್ಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.
ಇದಕ್ಕೂ ಮುನ್ನ, ಮಂಗಳವಾರ, ಪಶ್ಚಿಮ ಬಂಗಾಳ ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದೀಯ ವಿಷಯಗಳಲ್ಲಿ ರಾಜ್ಯಪಾಲ ಧಂಕರ್ ಅವರ ಅತಿಯಾದ ಹಸ್ತಕ್ಷೇಪ ಹಾಗೂ ವಿಧಾನಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ದೂರು ನೀಡಿದ್ದರು.