ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಲಸಿಕೆ ವಿತರಣೆ
ಮಂಗಳೂರು, ಜೂ.25: ಕೊರೋನ ಮುಕ್ತ ಸಮಾಜಕ್ಕೆ ತನ್ನ ಕೊಡುಗೆಯನ್ನು ಸಲ್ಲಿಸುವ ನಿಟ್ಟಿನಲ್ಲಿ ಎಕ್ಸಲೆಂಟ್ ಎಜುಕೇಷನ್ ಫೌಂಡೇಷನ್‌ನಿಂದ ಪರಿಸರದ ಆವರಣದಲ್ಲಿ ಜಸ್ಟೀಸ್ ಕೆ.ಎಸ್. ಹೆಗ್ಡೆ ಮೆಮೋರಿಯಲ್ ಹಾಸ್ಪಿಟಲ್ ಸಹಯೋಗದೊಂದಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗೆ ಉಚಿತ ಲಸಿಕೆ ನೀಡಲಾಯಿತು.
ಕೋವಿಡ್ ಲಸಿಕೆ ಅಭಿಯಾನದ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ. ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಯೂ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕೆಂಬ ಸದುದ್ದೇಶದಿಂದ ಕೇಂದ್ರ ಸರಕಾರ ಉಚಿತ ಲಸಿಕೆ ನೀಡುತ್ತಿದೆ. ಲಸಿಕೆಯನ್ನು ತೆಗೆದುಕೊಂಡು ಉಳಿದವರಿಗೂ ಲಸಿಕೆಯನ್ನು ತೆಗೆದುಕೊಳ್ಳುವಂತೆ ಪ್ರೇರೇಪಿಸಬೇಕೆಂದು ಹೇಳಿದರು.
ಕೊರೋನದಿಂದ ಸಂಕಷ್ಟಕ್ಕೀಡಾದ ಜನರಿಗಾಗಿ ಸೇವೆ ಸಲ್ಲಿಸುತ್ತಿರುವ ಕೊರೋನ ವಾರಿಯರ್ಸ್ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿದ್ದಂತೆ. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಸ್ವಚ್ಛ ಭಾರತ ಮುಂತಾದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮೂಡುಬಿದಿರೆ ಪರಿಸರದಲ್ಲಿ ನಡೆಸುತ್ತಾ ಬಂದಿದೆ. ಕೊರೋನ ಸಂಕಷ್ಟ ಕಾಲದಲ್ಲಿ ಸುತ್ತಮುತ್ತಲಿನ ಜನತೆಗೆ ಉಚಿತ ಕಿಟ್ ನೀಡುವ ಮೂಲಕ ಸಮಾಜ ಸೇವಾ ಕಾರ್ಯಕ್ಕೆ ಕೈ ಜೋಡಿಸಿದೆ ಎಂದು ಶ್ಲಾಘಿಸಿದರು.
ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮೂಡುಬಿದಿರೆ ಪುರಸಭೆಯ ಉಪಾಧ್ಯಕ್ಷೆ ಸುಜಾತ ಶಶಿಧರ್ ಮತ್ತು ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್‌ನ ಡಾ.ಅನುಷಾ ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮತ್ತು ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೇಜಸ್ವಿ ಭಟ್ ಸ್ವಾಗತಿಸಿ, ಕಾರ್ಯಕ್ರಮ ವಂದಿಸಿದರು.