ಉಡುಪಿ: ಗೃಹ ಸಚಿವರಿಂದ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ
ಉಡುಪಿ, ಜೂ.28: ಜಿಲ್ಲೆಗೆ ಇಂದು ಭೇಟಿ ನೀಡಿದ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಇಂದು ಅಪರಾಹ್ನ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯರ್ತರೊಂದಿಗೆ ಸಂವಾದ ನಡೆಸಿದರು.
ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಕಾರಿಗಳು, ಜನಪ್ರತಿನಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆ ಮಾಡಿದ್ದಾರೆ. ಜನಸಾಮಾನ್ಯರು ಕೋವಿಡ್‌ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಪ್ ಕ್ವಾರೆಂಟೈನ್ ಆಗಿದ್ದ ಸನ್ನಿವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‌ನಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ ಎಂದರು.
ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಸಚಿವರು, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪದಾಕಾರಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಭಾಗವಹಿಸುವುದಾಗಿ ನುಡಿದರು.
ಉಡುಪಿ ಜಿಲ್ಲೆಯಾದ್ಯಂತ ಕಿಂಡಿ ಅಣೆಕಟ್ಟುಗಳ ನಿರ್ಮಾಣ ಪ್ರಗತಿಯಲ್ಲಿದ್ದು, ರಸ್ತೆಗಳ ಅಭಿವೃದ್ಧಿ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಿ ಕಡಲ ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಸುನೀಲ್ ಕುಮಾರ್, ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾ. ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಹಾಗೂ ಪಕ್ಷದ ವಿವಿಧ ಜಿಲ್ಲಾ ಪದಾಕಾರಿಗಳು ಉಪಸ್ಥಿತರಿದ್ದರು.