ಕೊರೋನ ಸಂದರ್ಭದಲ್ಲಿ ರಾಜ್ಯ ಸರಕಾರದಿಂದ 4,000 ವೈದ್ಯರ ನೇಮಕ: ಸಚಿವ ಡಾ.ಸುಧಾಕರ್

Update: 2021-06-28 17:21 GMT

ಬೆಂಗಳೂರು, ಜೂ.28: ಸರಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ. ಇತ್ತೀಚೆಗೆ ಪೂರ್ಣಗೊಂಡ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೋನ ಸಂದರ್ಭದಲ್ಲಿ ರಾಜ್ಯ ಸರಕಾರ ಒಟ್ಟು 4,000 ವೈದ್ಯರನ್ನ ನೇಮಿಸಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸೋಮವಾರ ನಗರದ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಬಿಬಿಎಸ್ ಪದವೀಧರರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಒಂದು ವರ್ಷ ಸೇವೆ ಸಲ್ಲಿಸುವ ಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. 1,001 ವೈದ್ಯರನ್ನು 18 ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಗುತ್ತಿಗೆ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಇಲಾಖೆಯ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳ ಐಸಿಯುನಲ್ಲಿ ಕೆಲಸ ಮಾಡಲು 666 ವೈದ್ಯರನ್ನು ನೇಮಕ ಮಾಡಲಾಗಿದೆ. ಜೂನ್ 30 ರೊಳಗೆ ಅವರೆಲ್ಲರೂ ಸ್ಥಳಕ್ಕೆ ಹೋಗಿ ಕೆಲಸ ಆರಂಭಿಸಲಿದ್ದಾರೆ ಎಂದು ಸುಧಾಕರ್ ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 348 ವೈದ್ಯರ ಹುದ್ದೆ ತುಂಬಲಾಗಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 90, ನೆಫ್ರೋ ಯುರಾಲಜಿಯಲ್ಲಿ 3 ವೈದ್ಯರನ್ನು ನೇಮಿಸಲಾಗಿದೆ. ಒಟ್ಟು 2,108 ಖಾಲಿ ಹುದ್ದೆ ಇದ್ದು, 2,053 ವೈದ್ಯರು ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆಸಿದ ನೇರ ನೇಮಕವೂ ಸೇರಿ ಒಟ್ಟು ನಾಲ್ಕು ಸಾವಿರದಷ್ಟು ವೈದ್ಯರ ನೇಮಕ ನಡೆದಿದೆ. ಇದು ಐತಿಹಾಸಿಕವಾದ ಪ್ರಕಿಯೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಶೇ.95 ರಷ್ಟು ಮಂದಿ ಕೋವಿಡ್‍ನಿಂದ ಗುಣಮುಖರಾಗಿರುವುದು ಆಶಾದಾಯಕವಾಗಿದೆ. ಪಾಸಿಟಿವಿಟಿ ದರ ಶೇ.2.62 ರಷ್ಟಿದೆ. ಕೊಡಗು, ಮೈಸೂರು, ಹಾಸನ ಹಾಗೂ ದಕ್ಷಿಣ ಕನ್ನಡದಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಅಧಿಕವಾಗಿದೆ. ಇಡೀ ದೇಶದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ ಬಿಟ್ಟರೆ ಹೆಚ್ಚು ಕೋವಿಡ್ ಪರೀಕ್ಷೆ ರಾಜ್ಯದಲ್ಲಾಗಿದೆ. ರಾಜ್ಯದಲ್ಲಿ 3,36,73,395 ಪರೀಕ್ಷೆ ಮಾಡಲಾಗಿದೆ. ಅಂದರೆ ಪ್ರತಿದಿನ ಒಂದೂವರೆ ಲಕ್ಷದಿಂದ ಒಂದೂಮುಕ್ಕಾಲು ಲಕ್ಷ ಪರೀಕ್ಷೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

11 ಜಿಲ್ಲೆಗಳಲ್ಲಿ ಕೋವಿಡ್‍ನಿಂದ ಮರಣ ಸಂಭವಿಸಿಲ್ಲ. ಒಟ್ಟಾರೆಯಾಗಿ ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಡಿಆರ್‍ಡಿಒ ಜೊತೆ ಕೆಲಸ ಮಾಡುತ್ತಿರುವ ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ 2 ಡಿಜಿ ಔಷಧಿ ಬಿಡುಗಡೆಗೊಳಿಸಿದ್ದು, ಅದನ್ನು ಖರೀದಿ ಮಾಡಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಮೂರನೇ ಅಲೆ ಬರುವ ಮುನ್ನವೇ ಈ ಔಷಧಿ ಖರೀದಿಸಲಾಗುವುದು ಎಂದು ಸುಧಾಕರ್ ಮಾಹಿತಿ ನೀಡಿದರು.

ಬೋಧಕ, ಬೋಧಕೇತರ ಸಿಬ್ಬಂದಿಗೆ ಕೊರೋನ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಹಕಾರ ನೀಡಲಿದೆ. ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಈ ಬಗ್ಗೆ ಸಲಹೆ ನೀಡುತ್ತಾರೆ. ಕರ್ನಾಟಕ ಹೆಲ್ತ್ ಪ್ರಮೋಶನ್ ಟ್ರಸ್ಟ್, ಅಸೋಸಿಯೇಶನ್ ಆಫ್ ಪಬ್ಲಿಕ್ ಹೆಲ್ತ್ ಟೆಕ್ನಾಲಜೀಸ್ ವತಿಯಿಂದ ಕ್ಷಯ ರೋಗಿಗಳಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ ಪರೀಕ್ಷೆಗೆ ಪ್ರಾಯೋಗಿಕ ಯೋಜನೆ ರೂಪಿಸಲಾಗಿದೆ. ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಬೆಳಗಾವಿಯಲ್ಲಿ ಈ ರೀತಿ ತಪಾಸಣೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.

ಈವರೆಗೆ 3,232 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 387 ಮಂದಿ ಗುಣಮುಖರಾಗಿದ್ದಾರೆ. 1,600 ಕ್ಕೂ ಹೆಚ್ಚು ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. 262 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಸದ್ಯಕ್ಕೆ ಲಸಿಕೆಯ ಸಂಗ್ರಹ ಇದೆ ಎಂದು ಸುಧಾಕರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News