×
Ad

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ: ಮುಖ್ಯಮಂತ್ರಿ

Update: 2021-06-29 20:53 IST

ಬೆಂಗಳೂರು, ಜೂ.29: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು ಶೀಘ್ರ ಅನುಮೋದನೆ ನೀಡಲು ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯಲ್ಲಿ ಈವರೆಗೆ 9003.86 ಕೋಟಿ ರೂ.ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ, ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರೈಸಬೇಕು ಎಂದು ತಾಕೀತು ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ 2362.62 ಕೋಟಿ ರೂ.ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಈ ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News