ಬಿಎಸ್‍ವೈ, ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆ ಕೋರಿರುವ ದೂರಿನ ಆದೇಶ ಕಾಯ್ದಿರಿಸಿದ ಕೋರ್ಟ್

Update: 2021-06-30 15:52 GMT

ಬೆಂಗಳೂರು, ಜೂ.30: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕೋರ್ಟ್ ಆದೇಶವನ್ನು ಜು.8ಕ್ಕೆ ಕಾಯ್ದಿರಿಸಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಆಪ್ತರಾದ ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ, ಸಂಜಯಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ.ಪ್ರಕಾಶ್, ಕ್ರೆಸೆಂಟ್ ಹೊಟೇಲ್ ಮಾಲಕ ಕೆ.ರವಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ತನಿಖೆ ಮಾಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನಗರದ 82ನೆ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು.

ಈ ದೂರಿನ ಕುರಿತು ಬುಧವಾರ ನಡೆದ ವಿಚಾರಣೆ ವೇಳೆ ಖುದ್ದು ವಾದ ಮಂಡಿಸಿದ ಅಬ್ರಹಾಂ, ಆರೋಪಿತರ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದರು. ಜತೆಗೆ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕೆಲ ಬ್ಯಾಂಕ್ ದಾಖಲೆಗಳು ಹಾಗೂ ವಾಟ್ಸಾಪ್ ಚಾಟ್‍ಗಳನ್ನು ಒಳಗೊಂಡ ದಾಖಲೆಗಳನ್ನು ಸಲ್ಲಿಸಿದರು. ವಾದ ಆಲಿಸಿದ ನ್ಯಾಯಾಲಯ ಅರ್ಜಿ ಕುರಿತ ಆದೇಶವನ್ನು ಜು.8ಕ್ಕೆ ಕಾಯ್ದಿರಿಸಿತು.

ಏನಿದು ಪ್ರಕರಣ: ಸಿಎಂ ಬಿ.ಎಸ್.ಯಡಿಯೂರಪ್ಪ, ಪುತ್ರ ವಿಜಯೇಂದ್ರ ಹಾಗೂ ಇತರೆ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಿಎಂ ಕುಟುಂಬದವರು ನಕಲಿ ಕಂಪೆನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಸರಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಹೀಗಾಗಿ ಇವರ ವಿರುದ್ಧ ತನಿಖೆ ನಡೆಸುವಂತೆ 2020ರ ನ.19ರಂದು ಎಸಿಬಿಗೆ ದೂರು ನೀಡಿದ್ದೆ. ಆದರೆ, ಎಸಿಬಿ ಅಧಿಕಾರಿಗಳು ದೂರಿನ ತನಿಖೆ ಮಾಡದೆ, ಸೂಕ್ತ ವಿವರಣೆಯನ್ನೂ ನೀಡದೆ 2020ರ ಡಿ.15ರಂದು ದೂರನ್ನು ಕೈಬಿಟ್ಟಿದ್ದಾರೆ. ಹೀಗಾಗಿ ಆರೋಪಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7, 8, 9, 10, 13 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 383, 384, 415, 418, 420 ಹಾಗೂ 120 ಬಿ ಅಡಿ ಎಫ್‍ಐಅರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಕ್ತ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಅಬ್ರಹಾಂ ಕೋರಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News