ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ: ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹ; ಎಸ್‍ಡಿಪಿಐ

Update: 2021-07-01 15:09 GMT

ಬೆಂಗಳೂರು, ಜು.1: ದೇಶದಲ್ಲಿ ಕೋವಿಡ್‍ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ವಿತರಿಸಲು ಮಾರ್ಗಸೂಚಿಯನ್ನು ಆರು ವಾರಗಳಲ್ಲಿ ರೂಪಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ)ದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಸ್ವಾಗತಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾಂಕ್ರಾಮಿಕದಿಂದ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಶಿಫಾರಸು ಮಾಡದಿರುವ ಮೂಲಕ ಎನ್‍ಡಿಎಂಎ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಉಲ್ಲೇಖಿಸಿದೆ. ನ್ಯಾಯಾಲಯದ ಈ ತೀರ್ಪು ಕೇಂದ್ರ ಸರಕಾರದ ಕಣ್ಣು ತೆರೆಸುವಂತಿದೆ ಎಂದು ಅಭಿಪ್ರಾಯಿಸಿದ್ದಾರೆ.

ಕೋವಿಡ್ ಪೀಡಿತರಿಗೆ ಕನಿಷ್ಠ ಪರಿಹಾರದ ನೆರವನ್ನು ಶಿಫಾರಸು ಮಾಡಲು ಮಾರ್ಗಸೂಚಿಗಳನ್ನು ರೂಪಿಸಲು ಎನ್‍ಡಿಎಂಎಗೆ ಶಾಸನಬದ್ಧ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಆದರೆ, ಕೇಂದ್ರ ಸರಕಾರ ಸೆಕ್ಷನ್ 12 ಕಡ್ಡಾಯ ನಿಬಂಧನೆಯಲ್ಲ ಎಂದು ವಾದಿಸುವ ಮೂಲಕ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದೆ. ಕೇಂದ್ರ ಸರಕಾರದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು ಸೆಕ್ಷನ್ 12ರಲ್ಲಿರುವ ಕಡ್ಡಾಯವಾಗಿ ಪರಿಹಾರ ನೀಡಬೇಕು ಎಂದು ಆದೇಶಿಸಿದೆ. ಆದ್ದರಿಂದ ಪರಿಹಾರ ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್‍ನಿಂದ ಮೃತಪಟ್ಟ ದೇಶದ ಪ್ರತಿ ಕುಟುಂಬಕ್ಕೆ ಕೇಂದ್ರ ಸರಕಾರ 5 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಸಿಗುವಂತಾಗಲು ಕೋವಿಡ್ ಸಂಬಂಧಿಸಿದ ನಂತರದ ಸಾವುಗಳನ್ನು ಕೂಡ ಕೋವಿಡ್ ಸಾಂಕ್ರಾಮಿಕಕ್ಕೆ ಬಲಿಯಾದವರು ಎಂದು ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News