ರಾಜ್ಯದಲ್ಲಿ ಕಾಂಗ್ರೆಸ್ ಈ ಜನ್ಮದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ

Update: 2021-07-01 16:21 GMT

ಬೆಂಗಳೂರು, ಜು. 1: `ಕಾಂಗ್ರೆಸ್ ಪಕ್ಷ ದಲಿತ, ಮುಸ್ಲಿಮ್, ಹಿಂದುಳಿದ ವರ್ಗ ಸೇರಿದಂತೆ ಜಾತಿಗೊಬ್ಬರಂತೆ ನಾಲ್ಕೈದು ಮಂದಿ ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿದರೂ, ಅವರು ರಾಜ್ಯದಲ್ಲಿ ಈ ಜನ್ಮದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಅವರಿಗೆ ಕನಸಾಗಿಯೇ ಉಳಿಯಲಿದೆ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. 

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿನಾಶದ ಅಂಚಿನಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಉಳಿಸಲು ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಿ.ಎಂ.ಇಬ್ರಾಹೀಂ, ಡಾ.ಜಿ.ಪರಮೇಶ್ವರ್ ಸೇರಿದಂತೆ ನಾಲ್ಕೈದು ಮಂದಿ ಸಿಎಂ ಸ್ಥಾನಕ್ಕೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಅಸಮಾಧಾನ ನಿಜ: `ಬಿಜೆಪಿಯಲ್ಲಿ ಕೆಲವರು ಹೇಳಿಕೆ ನೀಡುವುದು ಸಹಜ. ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿರುವುದು ನಿಜ. ಅದನ್ನು ನೆಪ ಮಾಡಿಕೊಂಡು ಬಿಜೆಪಿ ಸರಕಾರ ಬಿದ್ದು ಹೋಗುತ್ತದೆ. ಮಧ್ಯಂತರ ಚುನಾವಣೆ ಬರುತ್ತದೆ ಎಂದು ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನದ ಹೆಸರುಗಳನ್ನು ಮುನ್ನಲೆಗೆ ತಂದರು. ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇದ್ದರೆ ಸಿಎಂ ಹೆಸರನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಿ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲ. ಆದರೆ, ಸಿಎಂ ಸ್ಥಾನಕ್ಕಾಗಿ ಬಡಿದಾಟ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯ ರಾಷ್ಟ್ರೀಯ ನಾಯಕರಾದ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಅಭಿಪ್ರಾಯ ಪಡೆದಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ನಾಯಕರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮನಸಿನ ಭಾವನೆ ಹೇಳಿದ್ದಾರೆ. ಬಿಜೆಪಿಯಲ್ಲಿ ಹೇಳುವವರು, ಕೇಳುವವರು ಇದ್ದಾರೆ. ಇಬ್ಬರು, ಮೂವರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮಕ್ಕೆ ಕೋರ್ ಕಮಿಟಿಯಲ್ಲಿ ಚರ್ಚೆಯಾಗಿದೆ ಎಂದು ಈಶ್ವರಪ್ಪ ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News