ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ತೀರ್ಮಾನ: ಸಿಎಂ ಯಡಿಯೂರಪ್ಪ

Update: 2021-07-08 14:41 GMT

ಬೆಂಗಳೂರು, ಜು. 8: `ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ವಸತಿ ಯೋಜನೆಗಳಡಿ ನಿರ್ಮಿಸುವ 5 ಲಕ್ಷ ಮನೆಗಳು ಮತ್ತು ಕೇಂದ್ರ ಸರಕಾರದ ಯೋಜನೆಗಳಡಿ 4 ಲಕ್ಷ ಮನೆಗಳು ಸೇರಿವೆ. ಮನೆ ನಿರ್ಮಿಸಲು ಪರಿಶಿಷ್ಟ ಫಲಾನುಭವಿಗಳಿಗೆ 1.75 ಲಕ್ಷ ರೂ. ಮತ್ತು ಇತರರಿಗೆ 1.20 ಲಕ್ಷ ರೂ. ಸಹಾಯಧನ ದೊರೆಯುತ್ತದೆ. ಕೇಂದ್ರದ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳಿಗೆ ಫಲಾನುಭವಿಗಳಿಗೆ ಶೇ.60 ಅಂದರೆ 72 ಸಾವಿರ ಮತ್ತು ರಾಜ್ಯದ ಪಾಲು ಶೇ.40 ಅಂದರೆ 48 ಸಾವಿರ ರೂ. ಸಹಾಯಧನ ಲಭ್ಯವಿದೆ' ಎಂದರು.

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 100 ಮನೆಗಳನ್ನು ಹಂಚಿಕೆ ಮಾಡಲಾಗುವುದು. ಈಗ ನಿರ್ಮಾಣದ ವಿವಿಧ ಹಂತಗಳಲ್ಲಿರುವ ರಾಜ್ಯ ಸರಕಾರದ ಬಸವ ವಸತಿ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ, ದೇವರಾಜ ಅರಸು ವಸತಿ ಯೋಜನೆ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗಳಡಿ ಮನೆಗಳನ್ನು ಪೂರ್ಣ ಮಾಡಲು 6,200 ಕೋಟಿ ರೂ.ಗಳ ಅಗತ್ಯವಿದೆ. ಹಂತ ಹಂತವಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದೆಂದು ಸಿಎಂ ಹೇಳಿದರು.

ಮುಖ್ಯಮಂತ್ರಿಗಳ 1 ಲಕ್ಷ ಬೆಂಗಳೂರು ಬಹು ಮಹಡಿ ಯೋಜನೆಯಡಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ 5 ಸಾವಿರ ಮನೆಗಳ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಸಭೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News