ರಾಜ್ಯಕ್ಕೆ ಆಗಮಿಸಿದ ಥಾವರ್ ಚಂದ್ ಗೆಹ್ಲೋಟ್: ರವಿವಾರ ರಾಜ್ಯಪಾಲರಾಗಿ ಪ್ರಮಾಣ ವಚನ
ಬೆಂಗಳೂರು, ಜು. 10: ರಾಜ್ಯದ ನೂತನ ರಾಜ್ಯಪಾಲರಾಗಿ ನಿಯೋಜಿತರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಹೊಸದಿಲ್ಲಿಯಿಂದ ಶನಿವಾರ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಮಿಸಿದ್ದು, ರಾಜ್ಯ ಸರಕಾರದ ಪರವಾಗಿ ಕಂದಾಯ ಸಚಿವ ಆರ್.ಅಶೋಕ್ ಸ್ವಾಗತಿಸಿದರು.
ನಾಳೆ(ಜು.11) ಬೆಳಗ್ಗೆ 10:30ಕ್ಕೆ ರಾಜಭವನದಲ್ಲಿ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿರುವ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.
ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೆಹ್ಲೋಟ್ ಅವರನ್ನು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸ್ವಾಗತಿಸಿದರು. ಬಳಿಕ ಥಾವರ್ ಚಂದ್ ಗೆಹ್ಲೋಟ್ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ಕರೆ ತರಲಾಯಿತು.
ರಾಜಭವನಕ್ಕೆ ಆಗಮಿಸಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನಿಕಟಪೂರ್ವ ರಾಜ್ಯಪಾಲ ವಜೂಭಾಯಿ ವಾಲಾ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉನ್ನತ ಅಧಿಕಾರಿಗಳು ಹೂ ಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ರಾಜ್ಯಪಾಲ ವಜುಭಾಯಿ ವಾಲಾ ಅವರು ಸುಮಾರು 6 ವರ್ಷ 10 ತಿಂಗಳು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ವಜುಭಾಯಿ ವಾಲಾ ಅವರ ಸ್ಥಾನಕ್ಕೆ ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂಡ್ ಅವರು ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸಿ ಅಧಿಕೃತವಾಗಿ ರಾಜ್ಯಪಾಲರಾಗಿ ಕಾರ್ಯಾರಂಭ ಮಾಡಲಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಅವರು ಒಬ್ಬ ಅನುಭವಿ ರಾಜಕಾರಣಿ ಮತ್ತು ಈ ಹಿಂದೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಬಡ ಜನರ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದು, ರಾಜ್ಯದ ಕುರಿತಂತೆ ಮಾಹಿತಿ ಉಳ್ಳವರಾಗಿದ್ದಾರೆ. ಆದುದರಿಂದ ಅವರನ್ನು ಕರ್ನಾಟಕ ರಾಜ್ಯದ ರಾಜ್ಯಪಾಲರನ್ನಾಗಿ ಮಾಡುವುದು ಸ್ವಾಗತಾರ್ಹ ಕ್ರಮವಾಗಿದೆ. ಆಡಳಿತಕ್ಕೆ ಅವರ ಅನುಭವವನ್ನು ಬಳಸಿಕೊಳ್ಳುತ್ತೇವೆ. ಇಂದು ಕರ್ನಾಟಕ ರಾಜ್ಯದ ಪರವಾಗಿ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸ್ವಾಗತಿಸುತ್ತಿದ್ದೇನೆ
-ಆರ್.ಅಶೋಕ್, ಕಂದಾಯ ಸಚಿವ