ರೈತ ನೆಮ್ಮದಿಯಿಂದ ಇದ್ದರೆ ಮಾತ್ರ ನಾವು ನೆಮ್ಮದಿಯಿಂದ ಇರಲು ಸಾಧ್ಯ: ಸಿಎಂ ಯಡಿಯೂರಪ್ಪ

Update: 2021-07-10 16:40 GMT

ಕಲಬುರಗಿ, ಜು. 10: `ರಾಜ್ಯದಲ್ಲಿನ ಎಲ್ಲ ರೈತ ನೆಮ್ಮದಿಯಿಂದ ಇದ್ದರಷ್ಟೇ ನಾವು ನೆಮ್ಮದಿಯಿಂದ ಇರಲು ಸಾಧ್ಯ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದಿಲ್ಲಿ ಹೇಳಿದ್ದಾರೆ.

ಶನಿವಾರ ಇಲ್ಲಿನ ರಂಗ ಮಂಡಿದರಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಸಂತಸ ತಂದಿದೆ. ನಮ್ಮದು ರೈತ ಪರ ಸರಕಾರ, ಹೀಗಾಗಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ' ಎಂದರು.

ರೈತರಿಗೆ ನೆರವು ನೀಡಲು ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅಲ್ಲದೆ, ರೈತರ ಕಲ್ಯಾಣಕ್ಕೆ ಕ್ರಮ ವಹಿಸಲಾಗಿದೆ. ಕೇಂದ್ರದ ಕೃಷಿ ಸಮ್ಮಾನ್ ಯೋಜನೆಯಡಿ ರಾಜ್ಯ ಸರಕಾರವು ನರವು ನೀಡುತ್ತಿದೆ. ಮುಂಗಾರು ಆರಂಭವಾಗಿದ್ದು ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಯಡಿಯೂರಪ್ಪ ಇದೇ ವೇಳೆ ವಿವರ ನೀಡಿದರು.

ರಾಜ್ಯದಲ್ಲಿ ಕೋವಿಡ್ ಮೂರನೆ ಅಲೆ ಬರಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಕೋವಿಡ್ ಮೊದಲ ಮತ್ತು ಎರಡನೆ ಅಲೆಗಿಂತ ಮೂರನೇ ಅಲೆಯಿಂದ ಇನ್ನೂ ಹೆಚ್ಚಿನ ತೊಂದರೆ ನೀಡಬಹುದು. ಆದುದರಿಂದ ಸಾರ್ವಜನಿಕರು ಸೂಕ್ತ ಮುನ್ನಚ್ಚರಿಕೆ ವಹಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ವೈಯಕ್ತಿಕ ಸ್ವಚ್ಛತೆ ಹಾಗೂ ಸರಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಯಡಿಯೂರಪ್ಪ ಕರೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News