ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಮುರುಗೇಶ್ ನಿರಾಣಿ

Update: 2021-07-12 16:10 GMT

ಬೆಂಗಳೂರು, ಜು.12: ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿರುವುದು  ಕಂಡು ಬಂದರೆ ತಕ್ಷಣವೇ ಅಂತಹವರನ್ನು ಸೇವೆಯಿಂದ ಅಮಾನತು ಪಡಿಸಿ, ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಎಚ್ಚರಿಸಿದ್ದಾರೆ.

ಸೋಮವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ವಾರ ಮಂಡ್ಯ ಜಿಲ್ಲೆಯ ಗಣಿಗಾರಿಕೆ ನಡೆಯುವ ಪ್ರದೇಶಗಳಿಗೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಧ್ಯಮದರವರ ಜೊತೆ ಖುದ್ದು ನಾನೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

ಒಂದು ವೇಳೆ ಭೇಟಿಯ ಸಂದರ್ಭದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಶಾಮಿಲಾಗಿರುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲಿಯೇ ಅಮಾನತು ಪಡಿಸುತ್ತೇನೆ. ನಮ್ಮ ಸರಕಾರ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದಕ್ಕೂ ಜಗ್ಗದೆ ಕಾನೂನು ಕ್ರಮ ಜರುಗಿಸುತ್ತದೆ ಎಂದು ಅವರು ತಿಳಿಸಿದರು.

ಕಳೆದ ಫೆಬ್ರವರಿ 22ರಂದು ನಾನೆ ಮಂಡ್ಯ ಜಿಲ್ಲೆಯ ಗಣಿಗಾರಿಕ ಪ್ರದೇಶಗಳಿಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್.ಎಸ್ ಅಣೆಕಟ್ಟಿನ ಸುತ್ತಮುತ್ತಲ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಕಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ ಎಂದು ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದರು.

ಕೆಲವು ಗಣಿಕಾರಿಕೆ ಕಂಪನಿಗಳು ಕಾನೂನು ಬಾಹಿರವಾಗಿ ಗಣಿಕಾರಿಕೆ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದ ತಕ್ಷಣ ಅವುಗಳಿಗೆ ದಂಡ ವಿಧಿಸಿ ಯಾವುದೇ ರೀತಿಯ ಚಟುವಟಿಕೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತದೆ ಎಂದು ಸಂಸದರು ನಮ್ಮ ಗಮನಕ್ಕೆ ತಂದ ಕೂಡಲೇ ಖುದ್ದು ನಾನೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಅವರು ಭರವಸೆ  ಕೊಟ್ಟರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 38  ಗಣಿಕಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಕಾರಿಕೆ ನಡೆಯುತ್ತಿಲ್ಲ. ಒಂದು ವೇಳೆ ನಮ್ಮ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುರುಗೇಶ್ ನಿರಾಣಿ ಹೇಳಿದರು.

ಪ್ರಾಯೋಗಿಕ ಸ್ಫೋಟ: ಪುಣೆಯಲ್ಲಿರುವ ಕೇಂದ್ರ ಜಲ ಮತ್ತು ಇಂಧನ ಸಂಶೋಧನಾ ಸಂಸ್ಥೆ ಮೂಲಕ  ಕೆಆರ್ ಎಸ್ ಅಣೆಕಟ್ಟಿನ ಸುತ್ತಮುತ್ತಲೂ ಪ್ರಾಯೋಗಿಕವಾಗಿ ಸ್ಪೋಟಕ ವಸ್ತಗಳನ್ನು ಬಳಸುವ ಕುರಿತಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಬಹುದು? ಇದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಈ ಹಿಂದೆಯೇ ಇದು ನಡೆಯಬೇಕಿತ್ತು. ಆದರೆ ಕೊರೋನ ಕಾರಣದಿಂದಾಗಿ ವಿಳಂಬವಾಗಿದೆ. ತಕ್ಷಣವೇ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ ಎಂದು ಅವರು ಹೇಳಿದರು.

ಸಂಸದೆ ಸುಮಲತಾ ಅಂಬರೀಶ್ ಅವರು, ಕೆಆರ್ ಎಸ್ ಅಣೆಕಟ್ಟು, ಮಂಡ್ಯದ ಬಗ್ಗೆ ಕಳಕಳಿ ಹಾಗೂ ಸಾವಜನಿಕರ ಬಗ್ಗೆ ಕಳಕಳಿ ಇಟ್ಟುಕೊಂಡು ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಸರಕಾರ ಯಾವುದೇ ಕಾರಣಕ್ಕೂ ಅಕ್ರಮ ಗಣಿಕಾರಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಮುರುಗೇಶ್ ನಿರಾಣಿ ಅವರು ಮತ್ತೊಮ್ಮೆ ಪುನರುಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News