×
Ad

ಕೋವಿಡ್ ನಿಯಂತ್ರಣಕ್ಕೆ ಬಿಗಿ ಕ್ರಮ: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ

Update: 2021-07-12 22:21 IST

ಬೆಂಗಳೂರು,ಜು.12 : ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದ ಗಡಿಭಾಗಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಅನುಸರಿಸುವಂತೆ ಗಡಿಭಾಗದ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು. 

 ಬೆಂಗಳೂರಿನಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಗಡಿಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು ಈ  ಸೂಚನೆ ನೀಡಿದರು. 

ಮಹಾರಾಷ್ಟ್ರ, ಕೇರಳ ರಾಜ್ಯಗಳ ಮೂಲಕ ಕರ್ನಾಟಕ ಪ್ರವೇಶ ಮಾಡುವ ಜನರು ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಿ. ಆರ್ ಟಿ ಪಿ ಸಿ ಆರ್  ನೆಗೆಟಿವ್  ವರದಿ ನೀಡುವಂತೆ ಸೂಚಿಸಿ. ಸೋಂಕಿನ ಲಕ್ಷಣ ಕಂಡುಬಂದರೆ ಅಂಥವರ ಗಂಟಲು ದ್ರವ  ಪರೀಕ್ಷೆಗೆ ಗಡಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಿ.  ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಸಹಾಯ ಪಡೆಯಿರಿ.  ಒಟ್ಟಾರೆ ಗಡಿಭಾಗಗಳಲ್ಲಿ ಸೋಂಕಿತರು ಹೊರ ರಾಜ್ಯಗಳಿಂದ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ  ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. 

 ಕಳೆದ ಬಾರಿ ಮಹಾರಾಷ್ಟ್ರ ಮತ್ತು ಕೇರಳದಿಂದಲೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ರಾಜ್ಯವನ್ನು ಪ್ರವೇಶ ಮಾಡಿತ್ತು.  ಈ ಬಾರಿ ಹಾಗೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಸ್ ಪ್ರಯಾಣಿಕರನ್ನು ರಾಯಾಂಡಮ್ ಆಗಿ ತಪಾಸಣೆ ಮಾಡಿ ಎಂದು ಅವರು ಸಲಹೆ ನೀಡಿದರು. 

ಬೆಳಗಾವಿ,  ಬೀದರ್,  ವಿಜಯಪುರ, ಕೊಡಗು, ಮೈಸೂರು ಚಾಮರಾಜನಗರ,  ಕಾರವಾರ, ದಕ್ಷಿಣ ಕನ್ನಡ ಸೇರಿದಂತೆ ಎಲ್ಲ ಗಡಿ ಜಿಲ್ಲೆಗಳ ಪೊಲೀಸ್ ಮುಖ್ಯಸ್ಥರೊಂದಿಗೆ ಸಂವಾದ ನಡೆಸಲಾಯಿತು. 

 ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂಸ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪರೆಡ್ಡಿ ವಿಡಿಯೋ ಕಾನ್ಫರೆನ್ಸ್ ನಲ್ಲಿ  ಸಚಿವರ ಜೊತೆ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News