ಬೆಳಗಾವಿಯಲ್ಲೇ ಅಧಿವೇಶನ ನಡೆಸಿ: ಬಸವರಾಜ ಹೊರಟ್ಟಿ

Update: 2021-07-13 15:52 GMT

ಬೆಳಗಾವಿ, ಜು.13: ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಈ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಅಧಿವೇಶನ ನಡೆಯಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ 15 ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ, ಜತೆಗೆ, ಮುಖ್ಯಮಂತ್ರಿಗಳೊಂದಿಗೆ ಚರ್ಚೆಯೂ ನಡೆಸಲಾಗಿದೆ ಎಮದರು.

2018ರ ಡಿಸೆಂಬರ್ ಬಳಿಕ ಈವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಹೀಗಾಗಿ ಅಧಿವೇಶನ ನಡೆಸುವಂತೆ ಮನವಿ ಮಾಡಲಾಗಿದೆ ಎಂದ ಅವರು, ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಬೇಕೆಂಬ ಆಸೆ ನಮ್ಮದಿದೆ. ಹೀಗೆ, ಅಧಿವೇಶನ ಮಾಡಿ ಎಂದು ನಿರ್ದೇಶನ ಕೊಡುವ ಅಧಿಕಾರ ನಮಗಿಲ್ಲ. ಸಚಿವ ಸಂಪುಟದಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದರು.

ಸದ್ಯ ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಧಿವೇಶನ ಕರೆಯಬಹುದೆಂಬ ಭರವಸೆ ಇದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಕರೆಯುವುದು ಸೂಕ್ತ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News