×
Ad

ಶಿವಮೊಗ್ಗ: ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕ್ರಮವಹಿಸಿ : ಎಂ.ಎಲ್.ವೈಶಾಲಿ

Update: 2021-07-14 16:23 IST

ಶಿವಮೊಗ್ಗ,ಜು.14 : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕನಿಷ್ಟ ಪ್ರಮಾಣಕ್ಕೆ ತಲುಪಿದ್ದು, ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಳು ಈವರೆಗೆ ಕೊರೋನ ಸೋಂಕು ನಿಯಂತ್ರಣಕ್ಕೆ ಶ್ರಮಿಸಿದ ಮಾದರಿಯಲ್ಲಿಯೇ ಇಲಾಖೆಯ ಉಳಿದ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೂ ವಿಶೇಷ ಗಮನಹರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಎಂ.ಎಲ್.ವೈಶಾಲಿ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಅನುಷ್ಠಾನದಲ್ಲಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕ ಸೇವೆಗೆ ಶ್ರಮಿಸಿದ ವೈದ್ಯರ ಶ್ರಮ ಅಭಿನಂದನೀಯ ಎಂದ ಅವರು ಕೇವಲ ಕಾರ್ಯನಿರ್ವಹಿಸುವುದು ಮಾತ್ರವಲ್ಲ ದಾಖಲೀಕರಣದ ಕಡೆಯೂ ಗಮನಹರಿಸಬೇಕಾದ ಅಗತ್ಯವಿದೆ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳ ಶ್ರಮ ವಿಶೇಷವಾಗಿದ್ದು, ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿ ಅಗ್ರಪಂಕ್ತಿಯಲ್ಲಿರುವಂತೆ ನೋಡಿಕೊಳ್ಳಬೇಕೆಂದವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನಗಳಿಂದಾಗುವ ಅನಾಹುತಗಳ ಬಗ್ಗೆ ಬಿತ್ತಿಚಿತ್ರಗಳು ಹಾಗೂ ವಿಡಿಯೋಗಳ ಮೂಲಕ ಪ್ರಚಾರ ಕೈಗೊಂಡು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಹಿಳೆ ಮತ್ತು ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಹೆರಿಗೆ ನಡೆಸಿರುವ, ಹಾಗೂ ಜನಿಸಿರುವ ಅಭಿಜಾತ ಶಿಶುಗಳಿಗೆ ಲಸಿಕೆ ಹಾಕಿರುವ ಬಗ್ಗೆ ನಮೂದಿಸಿರುವ ದಾಖಲೆಗಳು ತೃಪ್ತಿಕರವಾಗಿಲ್ಲ. ಈ ಬಗ್ಗೆ ವಿವರವಾದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ವೈದ್ಯಾಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು ಎಂದರು.

ಮಳೆಗಾಲ ಆರಂಭವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು, ಅವುಗಳ ನಿಯಂತ್ರಣಕ್ಕಾಗಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ವೈದ್ಯಾಧಿಕಾರಿಗಳಿಗೆ ಅವರು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News