​ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿಗಳಿಂದ ನಾಟಿ ಕಾರ್ಯ

Update: 2021-07-19 13:55 GMT

ಕಲ್ಯಾಣಪುರ, ಜು.19: ಸ್ಥಳೀಯ ಮಿಲಾಗ್ರಿಸ್ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕೊಡಂಕೂರು ಪರಿಸರದ ಗದ್ದೆಯಲ್ಲಿ ನಾಟಿ ಕಾರ್ಯ ಹಾಗೂ ಕಡೆಕಾರು ಪರಿಸರದಲ್ಲಿ ನಾಟಿ ಮಾಡಿದ ಗದ್ದೆಯಲ್ಲಿ ಬೆಳೆದಿರುವ ಕಳೆಯನ್ನು ಕೀಳುವ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಕೇದಾರೋತ್ಥಾನ ಟ್ರಸ್ಟ್ ಉಡುಪಿ ಇವರ ಸಹಯೋಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕೇದಾರೋತ್ಥಾನ ಟ್ರಸ್ಟ್‌ನ ಕೋಶಾಧಿಕಾರಿ ರಾಘವೇಂದ್ರ ಕಿಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೇದಾರೋತ್ಥಾನ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್ ಉಪಸ್ಥಿತ ರಿದ್ದು ಮಾತನಾಡಿ ಯುವ ಜನತೆಗೆ ಕೃಷಿ ಚಟುವಟಿಕೆ ಈ ದಿನಗಳಲ್ಲಿ ಅತೀ ಅಗತ್ಯವಾಗಿದ್ದು, ಅವರು ಇದರಲ್ಲಿ ತೊಡಗಿಸಿಕೊಳ್ಳಬೇಕು. ಕೃಷಿಕರ ನೋವು ನಲಿವುಗಳನ್ನು ತಿಳಿದುಕೊಳ್ಳಲು ಸ್ವತ: ನಾವೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದರು.

ಸ್ಥಳೀಯ ನಗರಸಭಾ ಸದಸ್ಯೆ ಸಂಪಾವತಿ,ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ವಯಂಸೇವಕರ ಜೊತೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ.ಜಯರಾಮ್ ಶೆಟ್ಟಿಗಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ರವಿನಂದನ್ ಭಟ್, ಎನ್ನೆಸ್ಸೆಸ್ ಅಧಿಕಾರಿಗಳಾದ ಅನುಪಮಾ ಜೋಗಿ ಮತ್ತು ಮೆಲ್ಸನ್ ಡಿಸೋಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News