ಪ್ರಾಣಿ ಬಲಿ ಕುರಿತು ಹದ್ದಿನ ಕಣ್ಣಿಡಲು ಅಧಿಕಾರಿಗಳಿಗೆ ಸೂಚನೆ: ಸಚಿವ ಪ್ರಭು ಚೌಹಾಣ್

Update: 2021-07-19 15:38 GMT

ಬೆಂಗಳೂರು, ಜು. 19: `ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ಈಗಾಗಲೇ ಜಾನುವಾರು ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹೊರ ರಾಜ್ಯದಿಂದ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಬೇಕು' ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದೆ. ಸಂಬಂಧಪಟ್ಟ ಪ್ರದೇಶದಲ್ಲಿ ಗೋಹತ್ಯೆ ನಡೆದಿರುವುದು ಕಂಡುಬಂದರೆ ಅಧಿಕಾರಿಗಳ ವಿರುದ್ಧವೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿಕೊಡುವ ಸಂಪ್ರದಾಯವಿದ್ದು, ಇದಕ್ಕಾಗಿ ಗೋವುಗಳನ್ನು ಬಳಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ' ಎಂದು ಹೇಳಿದ್ದಾರೆ.

`ರಾಜ್ಯದ ಎಲ್ಲ ಗಡಿಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಒಂದು ವೇಳೆ ಎಲ್ಲಾದರೂ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಪಶುಸಂಗೋಪನೆ ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ತಿಳಿಸಿ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ. ಆದರೆ, ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ' ಎಂದು ಅವರು ಮನವಿ ಮಾಡಿದ್ದಾರೆ.

ಸಮನ್ವಯತೆಯಿಂದ ಕಾರ್ಯನಿರ್ವಹಿಸಿ: `ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತಾಗಿ ಸಭೆಗಳು ನಡೆದಿದ್ದು, ಗಡಿಭಾಗದಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸೇರಿ ಕಟ್ಟುನಿಟ್ಟಿನ ನಿಗಾ ವಹಿಸಲು ಸೂಚಿಸಲಾಗಿದೆ. ಪ್ರಾಣಿ ಕಲ್ಯಾಣ ಮಂಡಳಿಗೆ ಸದಸ್ಯರಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಅಧಿಕಾರಿಗಳು ಸಮನ್ವಯದಿಂದ ಅಕ್ರಮ ಗೋವುಗಳ ಸಾಗಣೆ ಆಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ' ಎಂದು ಅವರು ಹೇಳಿದ್ದಾರೆ.

ವದಂತಿಗಳಿಗೆ ಕಿವಿ ಕೊಡಬೇಡಿ: 

`ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಕದಡಲು ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿಗಳನ್ನು ಹರಿ ಬಿಡುತ್ತಾರೆ. ಈ ರೀತಿ ಸಮಾಜದಲ್ಲಿ ಅಶಾಂತಿ ನಿರ್ಮಿಸಲು ಪ್ರಯತ್ನಿಸುವುದು ಕಂಡುಬಂದಲ್ಲಿ ಪೊಲೀಸ್ ಇಲಾಖೆ ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಿದೆ'

-ಪ್ರಭು ಚೌಹಾಣ್ ಪಶುಸಂಗೋಪನಾ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News