ಮುಂದಿನ ಎರಡು ವರ್ಷ ಬಿಎಸ್‍ವೈ ಮುಖ್ಯಮಂತ್ರಿ: ಡಾ.ಸಿ.ಎನ್.ಅಶ್ವತ್ಥ ನಾರಾಯಣ
ರಾಮನಗರ, ಜು.19: ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೆ ಗೊಂದಲಗಳು ಇಲ್ಲ. ಯಡಿಯೂರಪ್ಪ ಅವರೇ ಮುಂದಿನ ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದರು.
ಯಡಿಯೂರಪ್ಪ ಜು.26ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಆ ಸಭೆಯ ಬಳಿಕ ಅವರು ರಾಜೀನಾಮೆ ನೀಡಲಿದ್ದಾರೆ ಅನ್ನೋದು ಕೇವಲ ಊಹಾಪೋಹ ಅಷ್ಟೇ. ನಮ್ಮ ಸರಕಾರ ಮುಂದಿನ ದಿನಗಳಲ್ಲಿ ಯಾವ ರೀತಿಯ ಯೋಜನೆಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಆಡಿಯೋ ತಮ್ಮದ್ದಲ್ಲ ಎಂದು ಈಗಾಗಲೆ ನಳಿನ್ ಕುಮಾರ್ ಕಟೀಲ್ ಅವರೇ ಸ್ಪಷ್ಟಣೆ ನೀಡಿದ್ದಾರೆ ಎಂದರು.