ಪೆಗಾಸಸ್ ಬೇಹುಗಾರಿಕೆ: ಸಂಸತ್ ಸಂಕೀರ್ಣದಲ್ಲಿ ಪ್ರತಿಪಕ್ಷಗಳ ಸದಸ್ಯರಿಂದ ಪ್ರತಿಭಟನೆ

Update: 2021-07-23 18:01 GMT

ಹೊಸದಿಲ್ಲಿ, ಜು. 23: ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ನ ರಾಹುಲ್ ಗಾಂಧಿ ಸಹಿತ ಪ್ರತಿಪಕ್ಷದ ಹಲವು ಸಂಸದರು ಸಂಸತ್ ಸಂಕೀರ್ಣದ ಒಳಗಡೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ‌

ಸಂಸತ್ತಿನ ಒಳಗಡೆ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಅಲ್ಲದೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ನಾಯಕರಾದ ಅಧೀರ್ ರಂಜನ್ ಚೌಧರಿ, ಕೆ.ಸಿ. ವೇಣುಗೋಪಾಲ್, ಶಶಿ ತರೂರ್, ಡಿಎಂಕೆಯ ಕನ್ನಿಮೋಳ್ ಹಾಗೂ ಶಿವಸೇನೆಯ ಪ್ರಿಯಾಂಕ ಚತುರ್ವೇದಿ ಮೊದಲಾದವರು ಪಾಲ್ಗೊಂಡರು. 

#ಪೆಗಾಸಸ್ ಸ್ನೂಪ್ ಗೇಟ್ ಹ್ಯಾಷ್ಟ್ಯಾಗ್ ಘೋಷಣೆಗಳ ಬ್ಯಾನರ್ ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಪ್ರಕರಣದ ತನಿಖೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಬೇಹುಗಾರಿಕೆ ನಡೆಸುವುದನ್ನು ನಿಲ್ಲಿಸುವಂತೆ ಘೋಷಣೆಗಳನ್ನು ಕೂಗಿದರು. ಸಂಸತ್ತಿನಲ್ಲಿ ಪ್ರತಿಪಕ್ಷಗಳು ಬೇಹುಗಾರಿಕೆಯಲ್ಲಿ ಕೇಂದ್ರ ಸರಕಾರ ಭಾಗಿಯಾಗಿದೆ ಎಂದು ಆರೋಪಿಸಿ ಕಲಾಪಕ್ಕೆ ಅಡ್ಡಿ ಉಂಟು ಮಾಡಿದವು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News