×
Ad

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸಿಲ್ಲ: ಸಚಿವ ಮುರುಗೇಶ್ ನಿರಾಣಿ

Update: 2021-07-24 17:40 IST

ಕಲಬುರಗಿ, ಜು. 24: "ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿರುತ್ತೇವೆ" ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಶನಿವಾರ ನಗರದ ಐವಾನ್-ಈ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ವರಿಷ್ಠರ ಆದೇಶವನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಇಲ್ಲಿ ಹುದ್ದೆಗಾಗಿ ಬೇರೆ ಪಕ್ಷದಂತೆ ಲಾಬಿ ನಡೆಯುವುದಿಲ್ಲ' ಎಂದು ಅವರು ಹೇಳಿದರು. 

"ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಲೂ ನಮ್ಮ ನಾಯಕರು. ಮುಂದೆಯೂ ಅವರೇ ನಮ್ಮ ಸಾರಥಿ. ನಮ್ಮ ಪಕ್ಷದ ಹೈಕಮಾಂಡ್ ಅತ್ಯಂತ ಪ್ರಬಲವಾಗಿದ್ದು, ಯಾರಿಗೆ ಯಾವ ಸ್ಥಾನವನ್ನು, ಯಾವ ಸಂದರ್ಭದಲ್ಲಿ ನೀಡಬೇಕೆಂಬುದನ್ನು ತೀರ್ಮಾನಿಸುತ್ತಾರೆ" ಎಂದು ಸಚಿವ ನಿರಾಣಿ ವಿವರಣೆ ನೀಡಿದರು. 

"ನಾನು ಯಾವುದೇ ಹುದ್ದೆಗಾಗಿ ಲಾಬಿ ಮಾಡುತ್ತಿಲ್ಲ, ರಾಷ್ಟ್ರಿಯ ನಾಯಕರು ಅಳೆದು ತೂಗಿ ಅರ್ಹರನ್ನೇ ಮುಖ್ಯಮಂತ್ರಿ ಮಾಡುತ್ತಾರೆ. ನನಗೆ ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಸ್ಥಾನಮಾನಕ್ಕಾಗಿ ನಾನು ಯಾವತ್ತೂ ಲಾಬಿ ಮಾಡಿಲ್ಲ" ಎಂದು ಮುರುಗೇಶ್ ನಿರಾಣಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. 

"ಬಿಜೆಪಿ ಪಕ್ಷದ 120 ಶಾಸಕರೂ ಸಿಎಂ ಹುದ್ದೆಗೆ ಅರ್ಹರು. ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ ಎಂದರು.

`ರಾಜ್ಯದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಅಧಿಕೃತವಾಗಿ ಈವರೆಗೆ ಯಾವುದೇ ಸೂಚನೆ ಬಂದಿಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರು. ಅವರ ಜೊತೆ ನಾವಿರುತ್ತೇವೆ. ಯಾರನ್ನು ಈ ಸ್ಥಾನಕ್ಕಾಗಿ ಕೂರಿಸಬೇಕೆಂದು ನಮ್ಮ ವರಿಷ್ಠರು ತೀರ್ಮಾನಿಸುತ್ತಾರೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಬೇಕು' ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News