ಜು.28ರವರೆಗೆ ಕರಾವಳಿಯಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಮಂಗಳೂರು, ಜು.24: ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜು.28ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜು.28ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜು.25 ಮತ್ತು 26ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ಮೀನುಗಾರರಿಗೆ ಎಚ್ಚರಿಕೆ: ರಾಜ್ಯದ ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ. ಇರುವ ಸಾಧ್ಯತೆ ಇದೆ. ಜು.28ರವರೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮಂಗಳೂರಿನಿಂದ ಕಾರವಾರದವರೆಗೆ 2.5 ಮೀಟರ್‌ನಿಂದ 3.7 ಮೀ. ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಆರ್ಭಟಿಸಲಿವೆ. ಸಮುದ್ರದಲ್ಲಿ ಮೇಲ್ಮೈ ಗಾಳಿಯ ವೇಗವು ಪ್ರತಿ ಸೆಕೆಂಡ್‌ಗೆ 45-78 ಸೆಂ.ಮೀ.ವರೆಗೆ ಬದಲಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.